ಬೆಂಗಳೂರು,ಆ.17:
ಕರ್ನಾಟಕ ರಾಜ್ಯದ ಬಹುತೇಕ ಕಡೆ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಮೂಲಗಳು ಹೇಳಿವೆ.
ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 20ರ ತನಕ ಜಡಿಮಳೆ ಮುಂದುವರಿಯಲಿದೆ.
ಉತ್ತರ ಒಳನಾಡಿನಲ್ಲಿ ಕೂಡ ಮುಂಗಾರು ಚುರುಕುಗೊಂಡಿದೆ. ಕೊಡಗು, ಹಾಸನ, ಕರಾವಳಿ ಹಾಗೂ ಶಿವಮೊಗ್ಗ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಆ.20ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಹವಾಮಾನ ಇಲಾಖೆ, ಆಗಸ್ಟ್ 20ರವರೆಗೆ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು, ಹಾಸನ, ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದೆ.
ಇದೇ ವೇಳೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ ಹಂತ ತಲುಪಿದೆ. ಮಲ ಪ್ರಭಾ, ಘಟಪ್ರಭಾ ಮತ್ತು ಕೃಷ್ಣಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನವಿಲು ತೀರ್ಥ ಜಲಾಶಯದಿಂದಲೂ ನೀರು ಬಿಡುಗಡೆ ಮಾಡಲಾಗುತ್ತಿದೆ