ರಾಜ್ಯದಲ್ಲಿ ಮುಂದಿನ ವರ್ಷದಿಂದ ಪಠ್ಯದಲ್ಲಿ ಯೋಗ ಶಿಕ್ಷಣವನ್ನು ಅಳವಡಿಸಿ ಶಾಲಾ ಹಾಗೂ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೇಳಿಕೊಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಜಾಗತಿಕ ಯೋಗ ಕೇಂದ್ರವಾಗಿರುವ ಜಿಗಣಿಯ ಎಸ್. ವ್ಯಾಸ ವಿವಿ ಸಿದ್ಧಪಡಿಸಿರುವ ಆರೋಗ್ಯ ತಂತ್ರ ಜ್ಞಾನ ಕುರಿತ ನೂತನ ಆಯಪ್ ಅನ್ನು ರಾಜ್ಯಕ್ಕೆ ಸಮರ್ಪಿಸಿ ಅವರು ಮಾತನಾಡಿದರು. ಪ್ರಸಕ್ತ ವರ್ಷದಲ್ಲಿ ಶಾಲಾ-ಕಾಲೇಜುಗಳ ಪಠ್ಯದಲ್ಲಿ ಯೋಗ ಕುರಿತ ಪಾಠವನ್ನು ಅಳವಡಿಸಿ, ವಿದ್ಯಾರ್ಥಿಗಳಿಗೆ ಹೇಳಿಕೊಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮುಂದಿನ ವರ್ಷ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರನ್ನು ನೇಮಕ ಮಾಡಿ ಯೋಗ ತರಗತಿ ಮೂಲಕ ಶಿಕ್ಷಣದಲ್ಲಿ ಕ್ರಾಂತಿ ತಂದು ವಿದ್ಯಾರ್ಥಿಗಳಿಗೆ ಚಿಕ್ಕ ವಯಸ್ಸಿನಲ್ಲಿ ಆರೋಗ್ಯ ಕಾಪಾಡಿ ಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು.