ಶಿವಮೊಗ್ಗ,
ಮಾದಕ ದ್ರವ್ಯ ಸೇವನೆಯಿಂದ ಎದುರಾಗುವ ಸಮಸ್ಯೆಗಳು ಮತ್ತು ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿ ಹಂತದಲ್ಲೇ ಅರಿವು ಮೂಡಿಸುವುದರಿಂದ ಇದರ ತಡೆ ಸಾಧ್ಯವಾಗುವುದು ಎಂದು 1 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾನು.ಕೆ.ಎಸ್ ತಿಳಿಸಿದರು.
ಇಂದು ಜಿಲ್ಲಾಡಳಿತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಣಿಕೆ ಯಿಂದ ಇಡೀ ಸಮಾಜದ ಮೇಲಾಗುವ ಹಾನಿ, ದುಷ್ಪರಿಣಾಮ ಕುರಿತು ಅರಿವು ಮೂಡಿಸಿ, ತಡೆಯುವ ಉದ್ದೇಶದಿಂದ ೧೯೮೯ ರಿಂದ ಪ್ರತಿ ವರ್ಷ ಜೂನ್ ೨೬ ರಂದು ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನವನ್ನು ಆಚರಿಸಲಾಗುತ್ತಿದೆ. ಈ ದಿನಾಚರಣೆಯ ಉದ್ದೇಶ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಗಳ ಕುರಿತು ವಿದ್ಯಾರ್ಥಿಗಳು, ಯುವಜನತೆ ಅರ್ಥ ಮಾಡಿಕೊಳ್ಳಬೇಕು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಿ.ಜಿ.ಶಿವಮೂರ್ತಿ ಮಾತನಾಡಿ, ನಟರು, ಶ್ರೀಮಂತರ ಮಕ್ಕಳು ಸೇರಿದಂತೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ಕಂಡು ಬರುತ್ತಿದೆ. ಇದರ ದುಷ್ಪರಿಣಾಮಗಳನ್ನು ಅರ್ಥಮಾಡಿಕೊಂಡು ಎಚ್ಚರಿಕೆಯಿಂದ ಬದುಕುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಿದೆ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜಣ್ಣ ಸಂಕಣ್ಣನವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿದರು.
ಜಿಲ್ಲಾ ಅಬಕಾರಿ ಅಧಿಕಾರಿ ಕ್ಯಾಪ್ಟನ್ ಅಜೀತ್ ಕುಮಾರ್, ಮನೋವೈದ್ಯರಾದ ಡಾ.ಸಂತೋಷ್. ಎಂ. ಎನ್, ಡಾ.ಸಿದ್ದನಗೌಡ ಪಾಟೀಲ್, ಡಾ.ಶ್ರೀಧರ್, ಡಾ.ಶಮಾ ಬೇಗಂ ಫಕೃದ್ದೀನ್ ಮತ್ತಿತರರಿದ್ದರು.