ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರೀಡೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಿದ ಮಕ್ಕಳಿಗೆ ಶೇ. 2 ಉದ್ಯೋಗ ಮೀಸಲಾತಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.
ತಾಲ್ಲೂಕಿನ ಮಾಲ್ವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ವಲಯ ಮಟ್ಟದ ಪ್ರಾಥಮಿಕ ಶಲಾ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಹಿಂದೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಮಕ್ಕಳ ಪೋಷಕರ ಭಯದಿಂದ ಹಿಂದೇಟು ಹಾಕುತ್ತಿದ್ದರು. ಬದಲಾದ ದಿನಮಾನಗಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಾಗಿ ಕ್ರೀಡೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಅತ್ಯಾಗತ್ಯವಾಗಿದೆ. ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಿದೆ ಎಂದರು.
ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಆದರೆ ಸೋತು ಕ್ರೀಡಾಪಟುಗಳು ಭವಿಷ್ಯದಲ್ಲಿ ಸೋಲನ್ನು ಗೆಲುವಾಗಿಸಿಕೊಳ್ಳುವ ಸಂಕಲ್ಪದೊಂದಿಗೆ ಇನ್ನಷ್ಟು ಕಠಿಣ ತಾಲೀಮು ನಡೆಸಬೇಕು. ಗ್ರಾಮೀಣ ಭಾಗದಲ್ಲಿ ಸಾಕಷ್ಟು ಕ್ರೀಡಾಪಟುಗಳಿದ್ದು ಅವರಿಗೆ ಸೂಕ್ತ ವೇದಿಕೆ ಕಲ್ಪಿಸಲು ಇಂತಹ ಸ್ಥಳೀಯ ಕ್ರೀಡಾಕೂಟಗಳ ಅಗತ್ಯ ಹೆಚ್ಚು ಇದೆ ಎಂದು ಹೇಳಿದರು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶೋಭಾ ರಾಮಕೃಷ್ಣ, ಉಪಾಧ್ಯಕ್ಷ ಮಹಾಬಲೇಶ್ವರ್, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಮಾಲತೇಶ್, ವಿವಿಧ ಗ್ರಾಮ ಪಂಚಾಯ್ತಿ ಸದಸ್ಯರು ಮತ್ತು ಗ್ರಾಮದ ಪ್ರಮುಖರು ಈ ಸಂದರ್ಭದಲ್ಲಿ ಹಾಜರಿದ್ದರು.