ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನ.19 ಮತ್ತು 20 ರಂದು ಪಿಜಿ ಸಿಇಟಿ ಮತ್ತು ಡಿಸಿಇಟಿ ಪರೀಕ್ಷೆಗಳು ನಗರದ 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್. ಹೊನ್ನಳ್ಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪರೀಕ್ಷೆ ಸಂಬಂಧ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ 07 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 4176 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. 19-11-2022 ರ ಮಧ್ಯಾಹ್ನ 2.30 ರಿಂದ 4.30 ರವರೆಗೆ ಎಂ.ಇ, ಎಂಟೆಕ್/ಎಂ.ಆರ್ಕ್(M.Arch) ಟೈಪ್ ಎ ಪರೀಕ್ಷೆ,
ದಿ: 20-11-2022 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆವರೆಗೆ ಡಿಸಿಇಟಿ ಪರೀಕ್ಷೆ, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಎಂಸಿಎ ಪರೀಕ್ಷೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಎಂಬಿಎ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷೆಗಳು ಪಾರದರ್ಶಕವಾಗಿ, ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ ಶಾಂತ ರೀತಿಯಲ್ಲಿ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ ಫಾಸಲೆವರೆಗಿನ ಪ್ರದೇಶದಲ್ಲಿ ಪರೀಕ್ಷಾ ದಿನಾಂಕಗಳಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ.
ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷೆ ಕೇಂದ್ರಗಳಿಗೆ ತಲುಪಿಸಲು ಹಾಗೂ ಉತ್ತರ ಪತ್ರಿಕೆ ಬಂಡಲ್‍ಗಳನ್ನು ಠೇವಣಿಕರಿಸಲು ತ್ರಿಸದಸ್ಯ ಸಮಿತಿ ನೇಮಕ ಮಾಡಿ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಬಂದೋಬಸ್ತ್ ನೀಡುವ ಕುರಿತು ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆಯಲಾಗಿದೆ ಎಂದರು.
ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಮತ್ತು ಯಾವುದೇ ರೀತಿಯ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ ಅವರು ಪರೀಕ್ಷಾ ವೇಳೆ ಮಾರ್ಗಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ವೀಕ್ಷಕರು ಮಾರ್ಗಸೂಚಿಯನ್ವಯ ತಮ್ಮ ತಮ್ಮ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು.
ಪರೀಕ್ಷಾ ಮುನ್ನ ದಿನವೇ ಸಂಬಂಧಿಸಿದ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿ, ಸೂಕ್ತ ರೀತಿಯ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿ, ವ್ಯವಸ್ಥಿತ ಮತ್ತು ಯಶಸ್ವಿ ಪರೀಕ್ಷೆಗೆ ಅಗತ್ಯವಾದ ಎಲ್ಲ ಪೂರ್ವ ತಯಾರಿ ಮತ್ತು ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಸಭೆಯಲ್ಲಿ ಡಿಡಿಪಿಯು ಕೃಷ್ಣಪ್ಪ, ಕೃಷಿ ಜಂಟಿ ನಿರ್ದೇಶಕಿ ಪೂರ್ಣಿಮಾ ಸೇರಿದಂತೆ ವಿವಿಧ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.