Site icon TUNGATARANGA

ಆನ್ ಲೈನ್ ಶಿಕ್ಷಣ ರದ್ದು

ರಾಜ್ಯದಲ್ಲಿ 5ನೇ ತರಗತಿವರೆಗೆ ಅನ್ವಯ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಪುಟ್ಟ ಮಕ್ಕಳ ಆನ್‌ಲೈನ್‌ ಶಿಕ್ಷಣಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಹಂತದ 5ನೇ ತರಗತಿವರೆಗೆ ಆನ್‌ಲೈನ್‌ ಶಿಕ್ಷಣವನ್ನು ಬುಧವಾರ ರದ್ದುಗೊಳಿಸಿದೆ.
ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ ನಂತರ ಆನ್ ಲೈನ್ ಶಿಕ್ಷಣ ರದ್ದುಗೊಳಿಸುವ ನಿರ್ಧಾರ ಪ್ರಕಟಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಎಲ್ಲಾ ಶಾಲೆಗಳು ಎಲ್‌ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಿಲ್ಲಿಸಬೇಕು. ಆನ್‌ಲೈನ್‌ ತರಗತಿ ಹೆಸರಿನಲ್ಲಿ  ತೆಗೆದುಕೊಳ್ಳುತ್ತಿರುವ ಶುಲ್ಕವನ್ನು ಕೂಡ ಕೂಡಲೇ ನಿಲ್ಲಿಸಬೇಕು. ಕೊರೋನಾ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ವರ್ಷ ಯಾವುದೇ ಶಾಲೆಗಳು ಶುಲ್ಕ ಹೆಚ್ಚಳ ಮಾಡುವಂತಿಲ್ಲ. ಆದರೆ, ಶುಲ್ಕವನ್ನು ಕಡಿತಗೊಳಿಸಲು ಅವಕಾಶವಿದೆ ಎಂದು ಹೇಳಿದರು.
ಇದೇ ವೇಳೆ ಶುಲ್ಕಕ್ಕಾಗಿ ಪೋಷಕರನ್ನು ಒತ್ತಾಯಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು.

Exit mobile version