ಸಾಗರ : ಮೇ ೧೦ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡುವಂತೆ ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಮನವಿ ಮಾಡಿದ್ದಾರೆ.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಚುನಾವಣಾ ಕಾರ್ಯ ಪರಿಶೀಲನೆ ನಡೆಸಿ ಮತಗಟ್ಟೆ ಅಧಿಕಾರಿಗಳಿಗೆ ಇವಿಎಂ ಯಂತ್ರ ವಿತರಣೆ ಮಾಡಿ ಅವರು ಮಾತನಾಡುತ್ತಾ, ಮತದಾರರು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಸೇರಿದಂತೆ ಯಾವುದಾದರೂ ಸರ್ಕಾರಿ ಗುರುತಿನಪತ್ರವನ್ನು ತೆಗೆದುಕೊಂಡು ಹೋಗಬಹುದು ಎಂದು ಹೇಳಿದರು.
ಕ್ಷೇತ್ರವ್ಯಾಪ್ತಿಯಲ್ಲಿ ೨೬೭ ಮತಗಟ್ಟೆಗಳನ್ನು ತೆರೆಯಲಾಗಿದ್ದು ಎರಡು ಪಿಂಕ್, ಒಂದು ಅಂಗವಿಕಲರಿಗಾಗಿ ಮತಗಟ್ಟೆಯನ್ನು ತೆರೆಯಲಾಗಿದೆ. ಒಟ್ಟು ೨೦೦೫೦೦ ಸಾವಿರ ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ಬಂದೋಬಸ್ತಿಗಾಗಿ ೬೧೫ ಪೊಲೀಸ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ೧೨೬೦ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ೩೨ ಸೂಕ್ಷ್ಮ ಮತ್ತು ೬ ಅತಿಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಪ್ರತಿಬೂತ್‌ನಲ್ಲಿ ಇಬ್ಬರು ಆರಕ್ಷಕರ ಜೊತೆ ಸಿ.ಆರ್.ಪಿ.ಎಫ್. ತಂಡದವರು ಇರುತ್ತಾರೆ ಎಂದರು.
ಮತದಾನ ಹೆಚ್ಚಿಸುವ ನಿಟ್ಟಿನಲ್ಲಿ ಕ್ಷೇತ್ರವ್ಯಾಪ್ತಿಯಲ್ಲಿ ಸ್ವೀಪ್ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಮಾಡಿದ್ದೇವೆ. ಈ ಬಾರಿ ಹಿಂದಿನ ಎಲ್ಲ ಚುನಾವಣೆಗಿಂತ ಹೆಚ್ಚಿನ ಮತದಾನವಾಗುತ್ತದೆ ಎನ್ನುವ ವಿಶ್ವಾಸವಿದೆ. ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವವ ಅಧಿಕಾರಿ ಸಿಬ್ಬಂದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.
ಸಾಗರ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್, ಹೊಸನಗರ ತಹಸೀಲ್ದಾರ್ ಡಿ.ಜಿ.ಕೋರಿ ಹಾಜರಿದ್ದರು.