ಶಿವಮೊಗ್ಗ, ಅಕ್ಟೋಬರ್ 17:
ಸೂಕ್ತ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಕರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಸಾಧ್ಯವಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಮಹಾಸ್ವಾಮೀಜಿ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಕರೋನಾ ವಿರುದ್ಧ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕರೋನಾ ನಿಯಂತ್ರಣಕ್ಕಾಗಿ ಈಗಾಗಲೇ ಹಲವು ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಪ್ರತಿಯೊಬ್ಬರೂ ಮನೆಯಿಂದ ಹೊರ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಬಳಸಿಕೊಳ್ಳಬೇಕು. ಕೆಮ್ಮುವಾಗ ಅಥವಾ ಸೀನುವಾಗ ಮೂಗು ಮತ್ತು ಬಾಯನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು. ಜ್ವರ ಅಥವಾ ಕೆಮ್ಮು ಇದ್ದರೆ ಯಾರನ್ನೂ ಭೇಟಿಯಾಗದೆ ಮನೆಯಲ್ಲಿಯೇ ಇರಬೇಕು. ಮನೆಯಿಂದ ಹೊರ ಹೋಗಬೇಕಾದಾಗ ಇತರರಿಂದ ಕನಿಷ್ಟ 6ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಹೇಳಿದರು.
ಜ್ವರ, ಕೆಮ್ಮು ಇತ್ಯಾದಿ ರೋಗ ಲಕ್ಷಣಗಳು ಬಂದರೆ ಉದಾಸೀನತೆ ತೋರದೆ ವೈದ್ಯರಿಗೆ ತೋರಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಕರೋನಾ ನಿಯಂತ್ರಣಕ್ಕೆ ಮುಂಜಾಗರೂಕತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲು ಈ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಭಾರ ಕಾರ್ಯದರ್ಶಿ ಇಶ್ರತ್ ಜಹಾನ್ ಆರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಡಿ.ಎನ್.ಹಾಲಸಿದ್ದಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ದೇವೇಂದ್ರಪ್ಪ, ಕೆ.ಸಿ.ಬಸವರಾಜಪ್ಪ ಮತ್ತಿತರರು ಉಪಸ್ಥಿತರಿದ್ದರು.