Site icon TUNGATARANGA

ಮೇ.27 : ಜೆ.ಎನ್.ಎನ್.ಸಿ.ಇ ಹಿರಿಯ ವಿದ್ಯಾರ್ಥಿಗಳ ಸಮ್ಮಿಲ್ಲನ

Click

ಶಿವಮೊಗ್ಗ : ನಗರದ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಜಾಗತಿಕ ಹಿರಿಯ ವಿದ್ಯಾರ್ಥಿಗಳ ಸಮ್ಮಿಲ್ಲನ ‘ನೆನಪಿನ ಅಂಗಳ-2023’ ಕಾರ್ಯಕ್ರಮವನ್ನು ಮೇ.27 ರಂದು ಶನಿವಾರ ಸರ್ಜಿ ಕನ್ವೆನ್ಷನ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

1981 ರಲ್ಲಿ ಸ್ಥಾಪನೆಗೊಂಡ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜು ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್, ಇನ್ಫಾರ್ಮೇಶನ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್, ಆರ್ಟಿಫೀಷಿಯಲ್ ಇಂಟಲಿಜೆನ್ಸ್ ಎಂಜಿನಿಯರಿಂಗ್ ಸೇರಿದಂತೆ ಎಂಬಿಎ, ಎಂಸಿಎ, ಎಂಟೆಕ್ ಸ್ನಾತಕೋತ್ತರ ಪದವಿ ವಿಭಾಗಗಳು ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಸುಮಾರು 18,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮುಗಿಸಿ ಯಶಸ್ಸಿನ ಹಾದಿಯೆಡೆಗೆ ಮುನ್ನಡೆಯುತ್ತಿದ್ದಾರೆ. ಅಂತಹ ಎಲ್ಲಾ ಹಿರಿಯ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸುವ ಆಶಯ ಕಾರ್ಯಕ್ರಮದ್ದಾಗಿದೆ.

ಅಂದು ಬೆಳಗ್ಗೆ 09:30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಭಾರತೀಯ ವಾಯುಸೇನೆಯ ನಿವೃತ್ತ ಅಧಿಕಾರಿ ವಿಶಿಷ್ಟ್ ಸೇವಾ ಪದಕ ಪುರಸ್ಕೃತ ಜನರಲ್ ಕ್ಯಾಪ್ಟನ್.ಆರ್.ಎ.ರಂಜನ್ ರಾಮ್, ಏರೋಸ್ಪೇಸ್ ಡಿಜಿಟಲ್ ಟೆಕ್ನಾಲಜಿ ಹಿರಿಯ ಮುಖ್ಯಸ್ಥರಾದ ಹೆಚ್.ಎಸ್ ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್, ಕಾರ್ಯದರ್ಶಿಗಳಾಗಿ ಎಸ್.ಎನ್.ನಾಗರಾಜ ಭಾಗವಹಿಸಲಿದ್ದು, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ವಿದ್ಯಾರ್ಥಿಗಳ‌ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಪ್ರತಿ ವರ್ಷದಂತೆ ಈ ಬಾರಿಯು ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ವಿವಿಧ ಏಳು ಕ್ಷೇತ್ರಗಳಲ್ಲಿ ಸಾಧನೆಗೈದ ಹಿರಿಯ ವಿದ್ಯಾರ್ಥಿಗಳಿಗೆ ವಿಶೇಷ ಪ್ರಶಸ್ತಿ ಪ್ರದಾನ, ಸಂಘಕ್ಕೆ ಕೊಡುಗೆ ನೀಡಿದ ಸಾಧಕ ಹಿರಿಯ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಕಾರ ನೀಡಲಾಗುತ್ತಿದೆ.

ಅಂದು ಮಧ್ಯಾಹ್ನ 12:30 ಹಿರಿಯ ವಿದ್ಯಾರ್ಥಿಗಳ ಸಂಘದ ಸರ್ವ ಸದಸ್ಯರ ಸಭೆ ಏರ್ಪಡಿಸಲಾಗಿದೆ. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿಕೊಡಲು ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Exit mobile version