ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿಯಾಗಿದೆ. ಆದರೆ ಕೆಲ ಅಧಿಕಾರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರಿಗಳು ಹಿಂದುತ್ವ ಮರೆಯುತ್ತಿದ್ದಾರೆ. ಇದು ಸರಿಯಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಗೂಂಡಾಗಳು ಕಾಂಗ್ರೆಸ್ ಸರ್ಕಾರ ತಮ್ಮ ಪರವಾಗಿದೆ ಎಂದು ಭಾವಿಸಿದರೆ ತಪ್ಪು. ಹರ್ಷನ ಹತ್ಯೆ ಘಟನೆಯನ್ನು ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಕುರಿತು ಪ್ರತಿಕ್ರಿಯಿಸಿದ ಈಶ್ವರಪ್ಪ, ರಾಜ್ಯದ ಬಿಜೆಪಿಯ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ಕಾರ್ಯಕರ್ತರು ಕೂಡ ಇದನ್ನೇ ಕೇಳುತ್ತಿದ್ದಾರೆ. ಕಾಂಗ್ರೆಸ್ ನವರು ಇದೇ ವಿಚಾರದಲ್ಲಿ ನಮ್ಮನ್ನು ಟೀಕಿಸುತ್ತಿದ್ದಾರೆ. ಸದನದಲ್ಲಿ ಲೇವಡಿ ಮಾಡುತ್ತಿದ್ದಾರೆ. ಕೇಂದ್ರದ ಬಿಜೆಪಿ ನಾಯಕರೂ ರಾಜ್ಯದ ಬೆಳವಣಿಗೆಯನ್ನು ಗಮನಿಸುತ್ತಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಈ ವಿಚಾರದಲ್ಲಿ ನಮ್ಮ ತಪ್ಪೇನಾದರು ಇದ್ದರೆ ಕರೆದು ಬುದ್ದಿ ಹೇಳಲಿ. ನಮಗೆ ಗೊತ್ತಾಗದೆ ಯಾವುದಾದರೂ ತಪ್ಪಾಗಿರಬಹುದು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಬೇಕೆಂಬುದು ನಮ್ಮ ಆಸೆ. ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಒಂದಾಗಿ 28 ಸ್ಥಾನ ಗೆಲ್ಲಬೇಕಿದೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನ ಘೋಷಿಸಲಿ ಎಂದು ಹೇಳಿದರು.
ಸಂಸತ್ ಚುನಾವಣೆ ಹತ್ತಿರ ಬರುತ್ತಿದೆ. ನಳೀನ್ ಕುಮಾರ್ ಕಟೀಲರನ್ನೇ ಮುಂದುವರೆಸುವುದಾದರೆ ಮುಂದುವರಿಸಲಿ. ಯಾವುದಾದರೂ ತೀರ್ಮಾನವನ್ನು ಆದಷ್ಟು ಬೇಗನೇ ತೆಗೆದುಕೊಳ್ಳಲಿ. ಈ ಬಗ್ಗೆ ಕೇಂದ್ರದ ನಾಯಕರಿಗೆ ನಾನು ಮನವಿ ಮಾಡುತ್ತೇನೆ ಎಂದು ಹೇಳಿದರು.