Site icon TUNGATARANGA

ಶಿವಮೊಗ್ಗ | ಪಟಾಕಿ ಮಳಿಗೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಸೂಚನೆ


ಶಿವಮೊಗ್ಗ,: ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಥಾಪಿಸಲಾಗುತ್ತಿರುವ ಪಟಾಕಿ ಮಾರಾಟ ಮಳಿಗೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳದಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ.


ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ಅನ್ನು ಜಾರಿಗೆ ತರಲಾಗಿದೆ.


ಈ ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. 14 ರಿಂದ 18 ವರ್ಷದೊಳಗಿನ ಕಿಶೋರಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲ್ಪಟ್ಟಿರುತ್ತದೆ.


ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version