ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವು ಖಾಸಗಿ ಶಾಲೆಗಳು ಮತ್ತು ನಂತರ ಮಧ್ಯಾಹ್ನವಾಗುತ್ತಿದ್ದಂತೆ ಸರ್ಕಾರಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿರುವ ಬಗ್ಗೆ ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ೧೫ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ನಾನು ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದೇನೆ.
ಮಕ್ಕಳ ಸುರಕ್ಷತೆಯ ಬಗ್ಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು. ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ. ಬೆದರಿಕೆ ಬಂದಿರುವ
ಶಾಲೆಗಳಿಗೆ ರಕ್ಷಣೆ ಕೊಡುತ್ತೇವೆ. ಈ ಬಗ್ಗೆ ಗೃಹ ಸಚಿವರ ಜೊತೆ, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ. ಪೋಷಕರಿಗೆ ಬಹಳ ಆತಂಕ ಇರುತ್ತದೆ. ಯಾರು ಹೆದರುವುದು ಬೇಡ ಧೈರ್ಯವಾಗಿರಿ ಎಂದು ತಿಳಿಸಿದ್ದಾರೆ.