ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತಿ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರೆಂಟಿ ಯೋಜನೆಗಳ ಜಿಲ್ಲಾಮಟ್ಟದ ಫಲಾನುಭವಿಗಳ ಸಮಾವೇಶ ಫೆ.24 ರಂದು ನಗರದ ಅಲ್ಲಮ ಪ್ರಭು (ಫ್ರೀಡಂ ಪಾರ್ಕ್ ) ಆವರಣದಲ್ಲಿ ಆಯೋಜಿಸಲಾಗಿದ್ದು, ಅರ್ಹ ಫಲಾನುಭವಿಗಳ ಕಾರ್ಯಕ್ರಮದಲ್ಲಿ ಹಾಜರಿರುವಂತೆ ತಿಳಿಸಿದ್ದಾರೆ’.
ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ ಸುಮಾರು 50 ಸಾವಿರ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳು ಭಾಗವಹಿಸಲಿದ್ದು, ಫಲಾನುಭವಿಗಳ ಅನುಕೂಲಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗಿದೆ. ಹಾಗಾಗಿ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಶ್ರೀಕಾಂತ್ ಕೋರಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಜಾತಿ, ಮತ ನೋಡದೆ ಎಲ್ಲ ವರ್ಗದ ಜನರಿಗೂ ಯೋಜನೆ ತಲುಪಿಸಿದೆ. ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಗೆ 4.58 ಲಕ್ಷ ಫಲಾನುಭವಿಗಳು, ಗೃಹ ಲಕ್ಷಿ ಯೋಜನೆಗೆ 3.55 ಲಕ್ಷ ಫಲಾನುಭವಿಗಳು, ಅನ್ನಭಾಗ್ಯದಿಂದ 3.80 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಿದೆ. ಶಕ್ತಿ ಯೋಜನೆಯಿಂದ ಜಿಲ್ಲಾ ವ್ಯಾಪ್ತಿಯಲ್ಲಿ 1.60 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ಶಿವಮೊಗ್ಗದಲ್ಲಿ ನಡೆಯುತಿರುವ ಗ್ಯಾರೆಂಟಿ ಸಮಾವೇಶವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಚಿವರುಗಳು, ಶಾಸಕರು, ಪ್ರಮುಖರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದ್ದಾರೆ.