Site icon TUNGATARANGA

ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಡಿಕೆ ಶಿವಕುಮಾರ್‌ರವರ ಮಾಸ್ಟರ್ ಮೈಂಡ್ ಕಾರಣ/ಕೂಡಲೇ ಸಚಿವ ಸಂಪುಟದಿಂದ ವಜಾ ಜೆಡಿಎಸ್‌ನಿಂದ ಅಗ್ರಹ

ಶಿವಮೊಗ್ಗ; ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಪೆನ್ ಡ್ರೈವ್ ಹಂಚಿಕೆಗೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಅವರೇ ಮಾಸ್ಟರ್ ಮೈಂಡ್ ಆಗಿದ್ದಾರೆ. ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು. ಮಹಿಳೆಯರ ಮಾನಹಾನಿಗೆ ಕಾರಣವಾಗಿರುವ

ಅಶ್ಲೀಲ ವಿಡಿಯೋಗಳ ಹಂಚಿಕೆ ಮಾಡುವುದನ್ನು ತಡೆಯಲು ರಾಜ್ಯ ಸರ್ಕಾರ ವಿಫಲವಾಗಿದೆ. ನೊಂದ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಸುಮಾರು 25 ಸಾವಿರ ಪೆನ್ ಡ್ರೈವ್ ಗಳ ಮೂಲಕ ಹಂಚಲಾಗಿದೆ.

ಇದರಲ್ಲಿ ಡಿ.ಕೆ. ಶಿವಕುಮಾರ್ ಪಾತ್ರವಿದೆ. ಅವರನ್ನು ವಜಾಗೊಳಿಸಬೇಕು ಮತ್ತು ಸೋರಿಕೆ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವರ್ಚಸ್ಸನ್ನು ಹಾಳು ಮಾಡಲು, ಜೆಡಿಎಸ್ ಪಕ್ಷ ನಿರ್ನಾಮ ಮಾಡಲು ಈ ಸಂಚು ರೂಪಿಸಲಾಗಿದೆ. ಎಸ್ಐಟಿ ತನಿಖೆಯಿಂದ ಏನೂ ಉಪಯೋಗವಾಗುವುದಿಲ್ಲ. ಇದನ್ನು ರದ್ದುಪಡಿಸಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ್, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ರಾಜ್ಯ ಕಾರ್ಯದರ್ಶಿ ಶಾರದಾ ಅಪ್ಪಾಜಿಗೌಡ, ನಗರಾಧ್ಯಕ್ಷ ದೀಪಕ್ ಸಿಂಗ್, ಪ್ರಮುಖರಾದ ನರಸಿಂಹ ಗಂಧದಮನೆ, ಹೆಚ್.ಎಂ. ಸಂಗಯ್ಯ, ತ್ಯಾಗರಾಜ್, ರಾಜಣ್ಣ, ಸಿದ್ದಪ್ಪ, ಗೀತಾ ಸತೀಶ್, ಪುಷ್ಪಾವತಿ, ಲೋಹಿತ್, ಗೋಪಿ, ಮೊದಲಾದವರಿದ್ದರು.

Exit mobile version