Site icon TUNGATARANGA

ವಿದ್ಯಾರ್ಥಿಗಳು ಸನ್ಮಾರ್ಗದಲ್ಲಿ ಜೀವನ ಮುನ್ನಡೆಸಲು ಶಿಕ್ಷಕರು ಹಾಗೂ ಪೋಷಕರ ಪಾತ್ರ ಮುಖ್ಯ ಆಗಿರುತ್ತದೆ:ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೃಷ್ಣಪ್ಪ

ಶಿವಮೊಗ್ಗ,ಜು.೧೩:ವಿದ್ಯಾರ್ಥಿಗಳು ಸನ್ಮಾರ್ಗದಲ್ಲಿ ಜೀವನ ಮುನ್ನಡೆಸಲು ಶಿಕ್ಷಕರು ಹಾಗೂ ಪೋಷಕರ ಪಾತ್ರ ಮುಖ್ಯ ಆಗಿರುತ್ತದೆ. ದೇಶದ ಇತಿಹಾಸದಲ್ಲಿನ ಶ್ರೇಷ್ಠ ವ್ಯಕ್ತಿಗಳ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸ ಆಗಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೃಷ್ಣಪ್ಪ ಹೇಳಿದರು.


ನಗರದ ಕುವೆಂಪು ರಂಗಮಂದಿರದಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜಿನ ವತಿಯಿಂದ ಆಯೋಜಿಸಿದ್ದ ೨೦೨೩-೨೪ ನೇ ಸಾಲಿನ ಪ್ರತಿಭಾ ಪುರಸ್ಕಾರ, ೨೦೨೪-೨೫ನೇ ಸಾಲಿನ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ಸಾಂಸ್ಕೃತಿಕ ವೇದಿಕೆ, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.


ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಪ್ರೋತ್ಸಾಹ ನೀಡುವುದು ಅತ್ಯಂತ ಅವಶ್ಯಕ. ಶ್ರೇಷ್ಠ ಸಾಧಕರ ಜೀವನ ಚರಿತ್ರೆಯು ಯುವ ಸಮೂಹಕ್ಕೆ ಪ್ರೇರಕಾ ಶಕ್ತಿಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಸಾಧಕರ ಜೀವನ ಚರಿತ್ರೆ ಅಧ್ಯಯನ ಮಾಡುವ ಸಂಕಲ್ಪ ಹೊಂದಬೇಕು ಎಂದು ತಿಳಿಸಿದರು.


ಡಿವಿಎಸ್ ಸಂಸ್ಥೆ ಉಪನ್ಯಾಸಕ ವರ್ಗ ಗುಣಮಟ್ಟದ ಶಿಕ್ಷಣ ನೀಡುವ ಜತೆಯಲ್ಲಿ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಇಂತಹ ಸಾರ್ಥಕ ಕಾರ್ಯ ನಿರಂತರವಾರಲಿ ಎಂದು ಶುಭಹಾರೈಸಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಕುಲಸಚಿವ ಡಾ. ಕೆ.ಸಿ.ಶಶಿಧರ್ ಮಾತನಾಡಿ, ಶಿಕ್ಷಣ ಜತೆಗೆ ಸದೃಢ ಭವಿಷ್ಯ ರೂಪಿಸಿಕೊಳ್ಳುವ ಕೌಶಲ್ಯ ಅಗತ್ಯ. ವಿದ್ಯಾರ್ಥಿಗಳು ಶಿಕ್ಷಣದ ನಂತರ ಆಯ್ಕೆ ಮಾಡುವ ವಿಷಯದಲ್ಲಿ ವಿಶೇಷ ಜಾಗೃತಿ ವಹಿಸಬೇಕು. ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಅಗತ್ಯ ಜೀವನಶೈಲಿ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್. ರಾಜಶೇಖರ್, ಸ್ವತಂತ್ರ ಹೋರಾಟಗಾರರ ಆಶಯದಂತೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಡಿವಿಎಸ್ ಸಂಸ್ಥೆ ಶ್ರಮಿಸುತ್ತಿದೆ. ಈ ಬಾರಿ ಡಿವಿಎಸ್ ಸಂಸ್ಥೆಯ ಸ್ವತಂತ್ರ ಪಿಯು ಕಾಲೇಜು ಒಂಬತ್ತು ಯಾಂಕ್ ಗಳಿಸಿದೆ. ಶೈಕ್ಷಣಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಅಭಿನಂದಿಸುವ ಜತೆಯಲ್ಲಿ ಇತರರಿಗೂ ಪ್ರೇರಣೆ ನೀಡಲು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.


ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಡಿವಿಎಸ್ ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿನ ಪ್ರಾಚಾರ್ಯ ಎ.ಇ.ರಾಜಶೇಖರ್, ಶಿಕ್ಷಕ ಪ್ರತಿನಿಧಿ ಎಚ್.ಸಿ.ಉಮೇಶ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಉಪನ್ಯಾಸಕರು, ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version