Site icon TUNGATARANGA

ಸೊರಬ | ಮನರಂಜನೆಗೆ ಕ್ರೀಡಾ ಕೂಟಗಳು ಸಹಕಾರಿ: ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿ ನಂದಿನಿ

ಸೊರಬ: ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ರಾಜ್ಯ ಸರ್ಕಾರಿ ನೌಕರರ ಮನರಂಜನೆಗೆ ಕ್ರೀಡಾ ಕೂಟಗಳು ಸಹಕಾರಿಯಾಗಿದೆ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿ ನಂದಿನಿ ಹೇಳಿದರು.
ಪಟ್ಟಣದ ಎಸ್. ಬಂಗಾರಪ್ಪ ಕ್ರೀಡಾಂಗಣದಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡಾಕೂಟಗಳು ನೌಕರರಲ್ಲಿ ಹೊಸ ಉತ್ಸಾಹ, ಹುಮ್ಮಸ್ಸು ಮೂಡಿಸಲು ನೆರವಾಗಲಿದೆ. ನೌಕರರಿಗೆ ಕ್ರೀಡಾಕೂಟದ ದಿನದಂದು ಮಾತ್ರವಲ್ಲ ನಿತ್ಯವೂ ನಿಯಮಿತವಾದ ವ್ಯಾಯಾಮ ಅಥವಾ ಕ್ರೀಡೆಗಳಲ್ಲಿ ತೊಡಗುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯವಂತರಾಗಿರಲು ಸಾಧ್ಯವಿದೆ ಎಂದರು.
ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಸ್. ಮಂಜುನಾಥ್ ಮಾತನಾಡಿ, ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಕ್ರೀಡಾಕೂಟ ನಡೆಸಲು ಸಾಧ್ಯವಾಗಲಿಲ್ಲ. ನೌಕರರು ಅತ್ಯಂತ ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವುದು ಸಂತಸವಾಗುತ್ತಿದೆ. ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ನೌಕರರ ಸಮ್ಮೇಳನದಲ್ಲಿ ಬಹುಮಾನ ನೀಡಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಹುತಾತ್ಮರ ದಿನಾಚರಣೆ ಅಂಗವಾಗಿ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ-ಬಲಿದಾನ ಮಾಡಿದ ಹುತಾತ್ಮರಿಗೆ ಎರಡು ನಿಮಿಷದ ಮೌನಚಾರಣೆ ಸಲ್ಲಿಸಲಾಯಿತು.
ತಹಶೀಲ್ದಾರ್ ಶಿವಾನಂದ ರಾಣೆ ಕ್ರೀಡಾಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸೊರಬ ವಲಯ ಅರಣ್ಯಾಧಿಕಾರಿ ಪ್ರಭುರಾಜ್ ಪಾಟೀಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಕ್ಷತಾ ವಿ. ಖಾನಾಪುರ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸೋಮಶೇಖರ್, ಎಪಿಎಂಸಿ ಕಾರ್ಯದರ್ಶಿ ಆಶಾ, ಸಣ್ಣ ನೀರಾವರಿ ಇಲಾಖೆಯ ಎಇಇ ರಾಮಣ್ಣ, ಬಿಆರ್‌ಸಿ ಎಚ್. ಆಂಜನೇಯ, ನೌಕರರ ಸಂಘದ ನೀಲಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಪಿ. ಸದಾನಂದ ನಿರೂಪಿಸಿ, ಸಿ.ಎಚ್. ವಿಶ್ವನಾಥ ವಂದಿಸಿದರು.

Exit mobile version