ಶಿವಮೊಗ್ಗ, ಮೇ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಮೇ 30.31 ನೇ ಹಾಗೂ ಜೂನ್ 01 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ತಿಳಿಸಿದ್ದಾರೆ.


ಈ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಮೇ ೩೦ರಂದು ಸಂಜೆ ೪.೩೦ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸುತ್ತಿದ್ದು, ಸಚಿವ ಸಂಪುಟದ ಹಲವು ಸಚಿವರುಗಳು ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚಿನ ನೌಕರ ಕ್ರೀಡಾಪಟುಗಳು ಭಾಗವಹಿಸುತ್ತಿರುವುದು ವಿಶೇಷ ಎಂದವರು ತಿಳಿಸಿದ್ದಾರೆ.


ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಟ್ರಾಕ್ಸ್‌ಸೂಟ್ ಮತ್ತು ಕ್ಯಾಪ್ ವಿತರಿಸಲಾಗುವುದು. ಎಲ್ಲಾ ಕ್ರೀಡಾಪಟುಗಳಿಗೂ ಮೂರು ದಿನಗಳ ಕಾಲ ಶುಚಿ-ರುಚಿಯಾದ ಊಟೋಪಹಾರವನ್ನು ಕಲ್ಪಿಸಲಾಗುವುದು. ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ವಿಶೇಷ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು. ಅಖಿಲ ಭಾರತ ನಾಗರೀಕ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟು ಗಳನ್ನು ಇದೇ ಸಂದರ್ಭದಲ್ಲಿ ಅಭಿನಂದಿಸ ಲಾಗುವುದು ಎಂದವರು ತಿಳಿಸಿದ್ದಾರೆ.


ಈ ಕ್ರೀಡಾಕೂಟ ನಡೆಯುವ ಆರಂಭದ ದಿನ ಮೇ ೩೦ರಂದು ಸಂಜೆ ೬ಗಂಟೆಯಿಂದ ಖ್ಯಾತ ಗಾಯಕ ವಿಜಯ್ ಪ್ರಕಾಶ್‌ರವರಿಂದ ಸಂಗೀತ ರಸಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೇ 31 ರಂದು ಸಂಜೆ 6.೦೦ ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಾಯೋಜಿತ ಜಾನಪದ ಕಲಾ ತಂಡಗ ಳಿಂದ ಸಾಂಸ್ಕೃತಿಕ ಸಂಗೀತ ರಸಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಕೇಂದ್ರ ಸಂಘದ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡಿರುವ ಎಲ್ಲಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸಿಗೊಳಿಸಿಕೊಡುವಂತೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮನವಿ ಮಾಡಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!