ಶಿವಮೊಗ್ಗ:
ನಗರದಲ್ಲಿ ಈಗ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದ್ದು, ಗಣಪತಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಶಿವಮೊಗ್ಗದ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿ ಸಮಿತಿ ಪ್ರಮುಖರೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ ಇಂದು ಚರ್ಚೆ ನಡೆಸಿದರು.
ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ ಮಾಡುವ ಕೋಟೆ ಭೀಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಸ್ಥಳ ಪರಿಶೀಲನೆ ನಡೆಸಿ ಪ್ರಮುಖರೊಂದಿಗೆ ಮಾಹಿತಿ ಪಡೆದರು.
ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲರೂ ಸೇರಿ ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಮನವಿ ಮಾಡಿದರು.
ಪೊಲೀಸರು ಎಲ್ಲಾ ರೀತಿಯ ಸಹಕಾರ ನೀಡುತ್ತಾರೆ. ಸಾರ್ವಜನಿಕರು ಮತ್ತು ಸಮಿತಿಯವರು ಕೂಡ ಪೊಲೀಸರಿಗೆ ಸಹಕಾರ ನೀಡಬೇಕು. ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ಮಾಡುವವರ ಮೇಲೆ ಪೊಲೀಸ್ ಶಿಸ್ತು ಕ್ರಮ ಕೈಗೊಳ್ಳಲಿದೆ. ಈಗಾಗಲೇ ಭದ್ರತೆ ಹೆಚ್ಚಿಸಲಾಗಿದೆ. ಯಾರೋ ಕೆಲವು ಕಿಡಿಗೇಡಿಗಳಿಂದ ಇಡೀ ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗವಾಗುತ್ತದೆ. ಈ ನಿಟ್ಟಿನಲ್ಲಿ ಎರಡೂ ಸಮುದಾಯದವರು ಅಂತಹ ಕಿಡಿಗೇಡಿಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.
ವೀರ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆ ಹಿನ್ನಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಭಾರಿ ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
ನಿನ್ನೆ ಮಧ್ಯಾಹ್ನ ನಡೆದ ಘಟನೆಯ ನಂತರ ಶಿವಮೊಗ್ಗಕ್ಕೆ ಆಗಮಿಸಿ ಮೊಕ್ಕಾಂ ಹೂಡಿರುವ ಅವರು ನಿನ್ನೆಯಿಂದಲೇ ವಿವಿಧ ಪ್ರದೇಶಗಳಿಗೆ ಭೇಟಿ ಪರಿಸ್ಥಿತಿ ಅವಲೋಕನ ಮಾಡಿದ್ದಾರೆ. ನಿನ್ನೆ ಇರಿತಕ್ಕೊಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ರಿರುವ ಪ್ರೇಮ್ ಸಿಂಗ್ ನನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.