. ಶಿವಮೊಗ್ಗ,ನ.05:
ರಾಜ್ಯ ಸರ್ಕಾರವು ಮಹಾತ್ವಾಕಾಂಕ್ಷಿ ಯಶಸ್ವಿನಿ ಆರೋಗ್ಯ ರಕ್ಷಣಾ ವಿಮಾ ಯೋಜನೆಯನ್ನು ಜಾರಿಗೆ ತಂದಿದ್ದು, ದಿನಾಂಕ 02.11.2022 ರಿಂದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಂದ ಸದಸ್ಯತ್ವ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ತಿಳಿಸಿದ್ದಾರೆ.
ಬ್ಯಾಂಕಿನ ಎಲ್ಲಾ ಸದಸ್ಯ ರೈತರು ಮತ್ತು ಸ್ವ-ಸಹಾಯ ಗುಂಪುಗಳ ಸದಸ್ಯರುಗಳು ತಮ್ಮ ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಸಮೀಪದ ಬ್ಯಾಂಕಿನ ಶಾಖೆಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದು ನೊಂದಣಿ ಮಾಡಿಸಿಕೊಳ್ಳಲು ಕೋರಿದ್ದಾರೆ.
ಇದು ಜಿಲ್ಲೆಯ ಲಕ್ಷಾಂತರ ರೈತ ಕುಟುಂಬದ ಸದಸ್ಯರಿಗೆ ಸಂತಸ ನೀಡಿದೆ. ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಠ ಮಿತಿ 5 ಲಕ್ಷಕ್ಕೆ ನಿಗದಿಪಡಿಸಿದ್ದು, ಗ್ರಾಮೀಣ ಭಾಗದ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/-ಗಳ ವಂತಿಕೆ ಮತ್ತು ನಗರ ಭಾಗದ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.1000/-ಗಳ ವಂತಿಕೆ, ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಶೇ 20 ರಷ್ಟು ಹೆಚ್ಚುವರಿಯಾಗಿ ಪಾವತಿಸತಕ್ಕದ್ದು ಎಂದಿದ್ದಾರೆ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ. ಜಿಲ್ಲೆಯ ರೈತರು ಹಾಗೂ ಸ್ವ-ಸಹಾಯ ಗುಂಪುಗಳ ಸದಸ್ಯರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದ್ದಾರೆ.
ತುಂಗಾತರಂಗ ದಿನಪತ್ರಿಕೆ ವಾಟ್ಸಪ್ ಗುಂಪಲ್ಲಿ ಇಲ್ಲದಿದ್ದರೆ ಮಾತ್ರ ಇಲ್ಲಿ ಸೇರಿ….https://chat.whatsapp.com/DUwqFhLKcAOFi9VRTuO8H6
9448256183