ಶಿವಮೊಗ್ಗ: ಕಲುಷಿತ ಆಹಾರ ಸೇವನೆ ಮಾಡಿದ್ದರಿಂದ ಆರೋಗ್ಯ ಸಮಸ್ಯೆಯಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮೇಲಿನ ಹನಸವಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಪದಾಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಆಹಾರ ಸೇವನೆ ಬಗ್ಗೆ ಪ್ರತಿಯೊಬ್ಬರು ಜಾಗೃತಿ ವಹಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ತಿಳಿಸಿದರು.
ಕಲುಷಿತ ಆಹಾರ ಸೇವಿಸಿ ಆರೋಗ್ಯ ಸಮಸ್ಯೆ ಉಂಟಾಗಿರುವ ಮಕ್ಕಳ ಆರೋಗ್ಯ ವಿಚಾರಿಸಿದರು.
ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆಯ ಎಲ್ಲ ಪೂರ್ವಾಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಸದಸ್ಯರ ಸಹಕಾರದಿಂದ ಮುಂದಿನ ದಿನಗಳಲ್ಲಿ ಹೆಚ್ಚು ಸಮಾಜಮುಖಿ ಚಟುವಟಿಕೆಗಳನ್ನು ನಡೆಸಲು ಉದ್ದೇಶಿಸಲಾಗಿದೆ. ಮಕ್ಕಳು, ಮಹಿಳೆಯರು ಹಾಗೂ ಸಾರ್ವಜನಿಕರಿಗೆ ಅನುಕೂಲ ಒದಗಿಸುವ ಆರೋಗ್ಯ ಶಿಬಿರಗಳನ್ನು ನಡೆಸಲಾಗುವುದು ಎಂದು ಹೇಳಿದರು.
ಜೆಸಿಐ ಶಿವಮೊಗ್ಗ ಭಾವನಾ ನಿಕಟಪೂರ್ವ ಅಧ್ಯಕ್ಷೆ ಶಾರದಾ ಶೇಷಗಿರಿಗೌಡ ಮಾತನಾಡಿ, ಜೆಸಿಐ ಸಂಸ್ಥೆಯು ಸೇವಾ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದೆ. ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜೆಸಿಐ ಭಾವನಾ ಶಿವಮೊಗ್ಗ ಸಂಸ್ಥೆ ವತಿಯಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಮೇಲಿನ ಹನಸವಾಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಅಧ್ಯಕ್ಷೆ ಪೂರ್ಣಿಮಾ ಸುನಿಲ್ ಅವರು ಬಿಸ್ಕೆಟ್ ಮತ್ತು ಹಣ್ಣಗಳನ್ನು ವಿತರಿಸಿದರು.
ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಕಾರ್ಯದರ್ಶಿ ಕವಿತಾ ಜೋಯಿಸ್, ಜೆಸಿಐ ಸಂಸ್ಥೆಯ ಕರಿಬಸಮ್ಮ ಮತ್ತಿತರರು ಉಪಸ್ಥಿತರಿದ್ದರು.