ಸುಮಾರು 14 ಕೋಟಿ ರೂ. ವೆಚ್ಚದಲ್ಲಿ ರಾಗಿಗುಡ್ಡದ ಮೇಲಿರುವ ದೇವಸ್ಥಾನವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಅವರು ಇಂದು ರಾಗಿಗುಡ್ಡದ ಬ್ರಹ್ಮ, ವಿಷ್ಣು, ಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ ಪ್ರಾರಂಭಿಸುವ ಹಿನ್ನೆಲೆಯಲ್ಲಿ ಹೋಮ ಮತ್ತು ವಿಶೇಷ ಪೂಜೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಶಿವಮೊಗ್ಗ ನಗರ ಪ್ರವಾಸಕ್ಕೆ ಮತ್ತು ಧಾರ್ಮಿಕ ಕ್ಷೇತ್ರಗಳೀಗೆ ಪ್ರಖ್ಯಾತಿ ಪಡೆದಿದೆ. ರಾಗಿಗುಡ್ಡದ ಮೇಲಿರುವ ಈ ತ್ರಿಮೂರ್ತಿಗಳ ದೇವಾಲಯ ಅನಾದಿ ಕಾಲದಿಂದಲೂ ಇದೆ. ಇದನ್ನು ಅಭಿವೃದ್ಧಿ ಪಡಿಸಬೇಕೆಂಬುದು ಭಕ್ತರ ಬಯಕೆಯಾಗಿತ್ತು. ಈಗ ಕಾಲ ಕೂಡಿ ಬಂದಿದ್ದು, ಈ ಸ್ಥಳದಲ್ಲಿ ಸುಮಾರು 108 ಅಡಿ ಎತ್ತರದ ಈಶ್ವರ ಲಿಂಗವನ್ನು ಸ್ಥಾಪಿಸಲಾಗುವುದು. ಫೆ.8ರಂದು ಮುಖ್ಯಮಂತ್ರಿಗಳು ಶಿವಮೊಗ್ಗಕ್ಕೆ ಆಗಮಿಸಲಿದ್ದು, ರಾಗಿಗುಡ್ಡ ದೇವಾಲಯದ ಅಭಿವೃದ್ಧಿ ಕಾಮಗಾರಿಗಳೂ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡುವರು. ಮತ್ತು ಈಗಾಗಲೇ ಮುಗಿದಿರುವ ಕಾಮಗಾರಿಗಳನ್ನು ಉದ್ಘಾಟಿಸುವರು ಎಂದರು.
ಶಿವಮೊಗ್ಗ ನಗರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ರಸ್ತೆ, ಕುಡಿಯುವ ನೀರು, ಸರ್ಕಾರಿ ಕಟ್ಟಡಗಳು ನಿರ್ಮಾಣವಾಗಿವೆ. ಬಹುಮುಖ್ಯವಾಗಿ 8 ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಯಾವ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಮುಖ್ಯಮಂತ್ರಿಗಳು ಈ ಶಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೂಡ ಉದ್ಘಾಟಿಸಲಿದ್ದಾರೆ ಎಂದರು
.
ನಗರದ ಎಲ್ಲಾ ಸಮುದಾಯದ ಜನರಿಗೆ ಸಮುದಾಯಭವನಗಳು, ಕಲ್ಯಾಣಮಂದಿರಕ್ಕಾಗಿ ಆದ್ಯತೆ ನೀಡಲಾಗಿದೆ. ದೇವಸ್ಥಾನಗಳನ್ನು ಅಭಿವೃದ್ಧಿಪಡಿಸಲಾಗಿದೆ. ಸುಮಾರು 95 ಸಮುದಾಯದ ಜನರಿಗೆ ಸಮುದಾಯಭವನ ನಿರ್ಮಿಸಿಕೊಡಲಾಗಿದೆ. ಮುಖ್ಯಮಂತ್ರಿಗಳು ಈ ಎಲ್ಲಾ ಕಾಮಗಾರಿಗಳಿಗೆ ಚಾಲನೆ ನೀಡುವರು ಎಂದರು.