ಶಿವಮೊಗ್ಗ,
೭ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನ ಕುರಿತು ಸರ್ಕಾರಿ ಆದೇಶ ಹೊರಡಿಸಿದರೆ ಮಾತ್ರ ಈಗಾಗಲೇ ಕರೆ ನೀಡಿರುವ ಮುಷ್ಕರ ವಾಪಾಸು ಪಡೆಯಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸ್ಪಷ್ಪಪಡಿಸಿದ್ದಾರೆ.
ಅವರು ಇಂದು ಸರ್ಕಾರಿ ನೌಕರರ ಸಂಘದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಈ ಹಿಂದಿನಿಂದಲೂ ೭ನೇ ಆಯೋಗದಿಂದ ಶೀಘ್ರ ಮಧ್ಯಂತರ ವರದಿ ಪಡೆದು ಜಾರಿ ಮಾಡುವಂತೆ ಒತ್ತಾಯಿಸುತ್ತಲೇ ಬರಲಾಗಿದೆ. ಮುಖ್ಯಮಂತ್ರಿಗಳು ಮಂಡಿಸಿದ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡುವ ನಿರೀಕ್ಷೆ ಇತ್ತಾದರೂ ಅದು ಹುಸಿಯಾಗಿದೆ. ಹಾಗಾಗಿ ಅನಿವಾರ್ಯವಾಗಿ ಮಾರ್ಚ್ ೦೧ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದೇವೆ ಎಂದರು.


ಈಗಾಗಲೇ ಫೆ.೨೧ರಂದು ಬೆಂಗಳೂರಿನಲ್ಲಿ ೨೦೦ ವೃಂದ ಸಂಘಗಳು ಸೇರಿದಂತೆ ಎಲ್ಲಾ ಸರ್ಕಾರಿ ನೌಕರರ ಸಂಘಟನೆಗಳ ೫೦೦೦ಕ್ಕೂ ಹೆಚ್ಚು ಪ್ರತಿನಿಧಿಗಳು ಸೇರಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಸರ್ವ ಸಮ್ಮತವಾಗಿ ಕರ್ತವ್ಯಕ್ಕೆ ಗೈರಾಗುವ ಮೂಲಕ ಪ್ರತಿಭಟನೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಗ್ರಾಮ ಪಂಚಾಯ್ತಿಯಿಂದ ಹಿಡಿದು ವಿಧಾನಸೌಧದವರೆಗೆ ಎಲ್ಲಾ ಸೇವೆಗಳಿಗೂ ಗೈರು ಹಾಜರಾಗಲಿದ್ದಾರೆ. ಶಿಕ್ಷಣ ಕ್ಷೇತ್ರದ ಸೇವೆಗಳೂ ಲಭ್ಯ ಇರುವುದಿಲ್ಲ ಎಂದು ತಿಳಿಸಿದರು.


ಎರಡು ಪ್ರಮುಖ ಬೇಡಿಕೆಗಳನ್ನು ಈಗಾಗಲೇ ಸರ್ಕಾರದ ಮುಂದೆ ಇಡಲಾಗಿದೆ. ೦೧-೦೭-೨೦೨೨ರಿಂದ ಜಾರಿಗೆ ಬರುವಂತೆ ಶೇ.೪೦ರಷ್ಟು ವೇತನ ಹೆಚ್ಚಳ ಸೌಲಭ್ಯ ಒದಗಿಸಬೇಕು. ಎನ್‌ಪಿಎಸ್ ರದ್ದು ಮಾಡಿ, ಓಪಿಎಸ್ ಜಾರಿಗೆ ತರಬೇಕು. ಈ ಸೌಲಭ್ಯದ ಬಗ್ಗೆ ಸರ್ಕಾರದ ಆದೇಶ ಹೊರಡಿಸಬೇಕು ಎಂದರು.


ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಮೋಹನ್‌ಕುಮಾರ್, ಮಾರುತಿ, ಸಿದ್ದಪ್ಪ, ರವಿ, ಅರುಣ್‌ಕುಮಾರ್ ಇನ್ನಿತರರು ಇದ್ದರು.

By admin

ನಿಮ್ಮದೊಂದು ಉತ್ತರ

error: Content is protected !!