ಶಿವಮೊಗ್ಗ,ಮೇ ೨೩: ಕಾಂಗ್ರೆಸ್ ತೊರೆದು ಇತ್ತೀಚೆಗೆ ಜೆಡಿಎಸ್ ಸೇರ್ಪಡೆಯಾಗಿದ್ದ ಮುಖಂಡರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಶಿವಮೊಗ್ಗ ಜಿಲ್ಲಾ ಕಾರ್ಮಿಕ ಕಾಂಗ್ರೆಸ್ ವಿಭಾಗದ ಅಧ್ಯಕ್ಷ ಮಧುಕುಮಾರ್.ಜಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ದೀಪಕ್ ಸಿಂಗ್ ಮತ್ತಿತರರು ಇತ್ತೀಚೆಗಷ್ಟೇ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆದರೆ, ಶಿವಮೊಗ್ಗ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಸೋಲುತ್ತಿದ್ದಂತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಇದೀಗ ಪುನಃ ಇವರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಹಿಂದಿರುಗಲು ಪ್ರಯತ್ನಿಸುತ್ತಿದ್ದು, ಇವರಿಗೆ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು’ ಎಂದು ಮಧು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷ ಕೆ.ಬಿ.ಪ್ರಸನ್ನಕುಮಾರ್ ಅವರನ್ನು ಶಾಸಕರನ್ನಾಗಿ ಮಾಡಿತ್ತು. ಅಲ್ಲದೇ, ಮತ್ತೊಂದು ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿತ್ತು. ಆದರೆ ಚುನಾವಣೆಯಲ್ಲಿ ಬಾರಿ ಅಂತರದಲ್ಲಿ ಸೋಲು ಅನುಭವಿಸಿದ ಕಾರಣಕ್ಕಾಗಿ ಈ ಬಾರಿ ಎಚ್.ಸಿ.ಯೋಗೀಶ್ ಅವರಿಗೆ ಪಕ್ಷ ಅವಕಾಶ ಮಾಡಿಕೊಟ್ಟಿತ್ತು. ಇದನ್ನು ಸಹಿಸಲು ಆಗದ ಪ್ರಸನ್ನಕುಮಾರ್ ಅವರು ಯೋಗೀಶ್ ಅವರನ್ನು ಸೋಲಿಸಲೆಂದೇ ಪಕ್ಷ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗಿದ್ದರು ಎಂದು ಅವರು ತಿಳಿಸಿದ್ದಾರೆ.

ಕೆ.ಬಿ.ಪ್ರಸನ್ನಕುಮಾರ್ ಮತ್ತವರ ತಂಡ ಇದೀಗ ತಮ್ಮ ಅಸ್ತಿತ್ವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ತಮಗೆ ಭವಿಷ್ಯವಿಲ್ಲ ಎಂಬುದು ಅರಿವಾಗುತ್ತಿದ್ದಂತೆ ಮರಳಿ ಕಾಂಗ್ರೆಸ್‌ಗೆ ಬರಲು ಪ್ರಯತ್ನ ನಡೆಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲೆಂದೇ ಜೆಡಿಎಸ್ ಪಕ್ಷಕ್ಕೆ ಹೋಗಿದ್ದ ಇವರನ್ನು ಪುನಃ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಂಡರೇ ಇಲ್ಲಿನ ನಿಷ್ಟಾವಂತ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ನೋವುಂಟಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ  ಆಯನೂರು ಮಂಜುನಾಥ್ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.

*ಸ್ಪಷ್ಟ ಪಡಿಸಲಿ:* ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕೇವಲ ೮೦೦೦ ಮತಗಳನ್ನಷ್ಟೇ ಪಡೆದುಕೊಂಡಿದ್ದಾರೆ. ಈ ಮತಗಳು ಜೆಡಿಎಸ್ ಪಕ್ಷ ಪಡೆದ ಮತಗಳೋ, ಇಲ್ಲವೇ ಕೆ.ಬಿ.ಪ್ರಸನ್ನಕುಮಾರ್ ಅವರ ವರ್ಚಸ್ಸಿನ ಮತಗಳೋ ಎಂಬುದನ್ನು ಅವರೇ ಸ್ಪಷ್ಟ ಪಡಿಸಬೇಕು ಎಂದು ಮಧು ವ್ಯಂಗ್ಯವಾಡಿದ್ದಾರೆ.

By admin

ನಿಮ್ಮದೊಂದು ಉತ್ತರ

error: Content is protected !!