ಶಿವಮೊಗ್ಗ : ಆಗಸ್ಟ್ ೧೫
ಜಿಲ್ಲೆಯ ಶರಾವತಿ ಸಂತ್ರಸ್ಥರು ಹಾಗೂ ಬಗರ್‌ಹುಕುಂ ಸಾಗುವಳಿದಾರರ ಭೂಒಡೆತನಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಕಗ್ಗಂಟಾಗಿ ಉಳಿದಿರುವ ಸಮಸ್ಯೆಗೆ ಶೀಘ್ರದಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಹಾಗೂ ರೈತರ ಹಿತ ಕಾಯುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.
ಅವರು ಇಂದು ಜಿಲ್ಲಾಡಳಿತದ ವತಿಯಿಂದ ನಗರದ ಡಿ.ಎ.ಆರ್.ಮೈದಾನದಲ್ಲಿ ಏರ್ಪಡಿಸಲಾಗಿದ್ದ ೭೭ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಅಡಿಷನಲ್ ಅಡ್ವೋಕೇಟ್ ಜನರಲ್ ಸೇರಿದಂತೆ ರಾಜ್ಯ ಮಟ್ಟದ ಅಧಿಕಾರಿಗಳು ಹಾಗೂ ತಜ್ಞರನ್ನೊಳಗೊಂಡಂತೆ ಈಗಾಗಲೇ ಅನೇಕ ಮಹತ್ವದ ಸಭೆಗಳನ್ನು ಏರ್ಪಡಿಸಿ, ಸಮಾಲೋಚನೆ ನಡೆಸಲಾಗಿದೆ. ಅಗತ್ಯವಿದ್ದಲ್ಲಿ ರೈತರ ಹಿತ ಕಾಯುವಲ್ಲಿ ಕಾನೂನು ಸಮರಕ್ಕೂ ಸರ್ಕಾರ ಬದ್ಧವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಅಗತ್ಯವಿದ್ದಲ್ಲಿ ಕೇಂದ್ರದ ಸಹಕಾರವನ್ನು ಪಡೆಯಲಾಗುವುದಲ್ಲದೇ ಸದರಿ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಮರ್ಥವಾಗಿ ವಿಷಯ ಮಂಡನೆ ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿನ ಕಂದಾಯ ಮತ್ತು ಅರಣ್ಯ ಇಲಾಖೆಗಳ ನಡುವಿನ ಭೂ ಸಮಸ್ಯೆಯನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಎರಡು ವರ್ಷಗಳಲ್ಲಿ ಶಿಕ್ಷಣ ಇಲಾಖೆಯನ್ನು ಇನ್ನಷ್ಟು ಬಲಿಷ್ಟಗೊಳಿಸಲು ಉದ್ದೇಶಿಸಲಾಗಿದೆ. ಶಾಲಾ ಕಟ್ಟಡಗಳ ದುರಸ್ತಿ, ಹೊಸ ಕಟ್ಟಡಗಳ ನಿರ್ಮಾಣ, ಶಾಲೆಗಳ ಉನ್ನತೀಕರಣ, ಕಾಲೇಜುಗಳ ಸ್ಥಾಪನೆ ಸೇರಿದಂತೆ ಅನೇಕ ಮಹತ್ವದ ಬದಲಾವಣೆಗೆ ಒತ್ತು ನೀಡಲಾಗುವುದು ಎಂದ ಅವರು, ಆಗಸ್ಟ್ ೧೮ರಂದು ೧ರಿಂದ ೧೦ನೇ
ಇಯತ್ತೆಯವರೆಗಿನ ಶಾಲಾ ಮಕ್ಕಳಿಗೆ ವಾರದ ಎರಡು ದಿನ ಮೊಟ್ಟೆಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಮಂಡ್ಯದಲ್ಲಿ ಚಾಲನೆ ನೀಡಲಾಗುವುದು. ಮೊಟ್ಟೆಗಳನ್ನು ಪಡೆಯದ ಮಕ್ಕಳಿಗಾಗಿ ಸೇಂಗಾ ಚಕ್ಕೆ ಮತ್ತು ಬಾಳೆಹಣ್ಣುಗಳನ್ನು ವಿತರಿಸಲು ಕ್ರಮ ವಹಿಸಲಾಗುವುದು. ರಾಜ್ಯದ ೬೦ಲಕ್ಷ ಮಕ್ಕಳು ಈ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಲಿದ್ದಾರೆ ಎಂದರು.
ಶೈಕ್ಷಣಿಕವಾಗಿ ಅನುತ್ತೀರ್ಣರಾದ ಮಕ್ಕಳಿಗೆ ಪುನರ್ ಅವಕಾಶ ಕಲ್ಪಿಸಿ, ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವ ಸದುದ್ದೇಶದಿಂದಾಗಿ ಪಿ.ಯು.ಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ೨ನೇ ಬಾರಿಗೆ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ೯೫೦೦೦ ಅರ್ಜಿಗಳು ಈವರೆಗೆ ಬಂದಿದ್ದು, ಈ ತಿಂಗಳಾಂತ್ಯದಲ್ಲಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ವರ್ಗಾವಣೆ ಬಯಸಿ ೮೭೦೦೦ಶಿಕ್ಷಕರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ೩೦೦೦೦ ಶಿಕ್ಷಕರು ಯಾವುದೇ ಕಿರಿಕಿರಿಯಿಲ್ಲದೇ ವರ್ಗಾವಣೆ ಹೊಂದಿದ್ದಾರೆ ಎಂದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯಿಂದ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದರು.
ಹಳೆಯ ಶಿಕ್ಷಣ ನೀತಿಯನ್ನೇ ಮುಂದುವರೆಸಲಾಗುತ್ತಿದ್ದು, ಪಠ್ಯಪುಸ್ತಕ ಪರಿಷ್ಕರಣೆಗೊಳಿಸುವ ಸಂಬಂಧ ಶಿಕ್ಷಣ ತಜ್ಞರ ಸಮಿತಿಯನ್ನು ರಚಿಸಲಾಗಿದೆ. ವಿಶೇಷವಾಗಿ ಇ-ಲೈಬ್ರರಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಇ-ಗ್ರಂಥಾಲಯದಲ್ಲಿ ಸುಮಾರು ೪೦+ ಲಕ್ಷಕ್ಕೂ ಹೆಚ್ಚಿನ ವಿವಿಧ ಪ್ರಕಾರಗಳ ಪುಸ್ತಕಗಳು ದೊರೆಯಲಿವೆ. ಅದರ ಸದಸ್ಯತ್ವಕ್ಕಾಗಿ ಯಾವುದೇ ಶುಲ್ಕ ಪಾವತಿಸುವ ಅಗತ್ಯವಿರುವುದಿಲ್ಲ. ಈ ಯೋಜನೆಯನ್ನು ಶಿಕ್ಷಕರ ದಿನಾಚರಣೆಯಂದು ಪುನರ್ ಲೋಕಾರ್ಪಣೆಗೊಳಿಸಲು ಉದ್ದೇಶಿಸಲಾಗಿದೆ. ಈಗಾಗಲೇ ೩.೩೫ಲಕ್ಷ ಮಂದಿ ಅದರ ಸದಸ್ಯರಾಗಿರುವುದು ಹರ್ಷವೆನಿಸಿದೆ. ಅಲ್ಲದೇ ಶಾಲಾ ಗ್ರಂಥಾಲಯಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ||ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ‍್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ ಲೋಖಂಡೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.