ಶಿವಮೊಗ್ಗ: ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೆ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ೦೮-೦೯-೨೦೨೩ರ ಇಂದು ಶುಕ್ರವಾರ ಬೆಂಗಳೂರಿನ ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ನಿಗಧಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ಕಳೆದೆರೆಡು ದಶಕಗಳಿಂದ ಜಿಲ್ಲಾ ಜೆಡಿಎಸ್‌ನ ಮುಖಂಡರಾಗಿದ್ದ ಶ್ರೀಕಾಂತ್ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶ್ರೀಕಾಂತ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್‌ಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಸೂತ್ರಧಾರಿಗಳಲ್ಲಿ ಒಬ್ಬರಾಗಿರುವ ಡಿ.ಕೆ. ಶಿವಕುಮಾರ್ ಮುಂಬರುವ ಲೋಕಸಭೆ, ಜಿಪಂ,ತಾಪಂ, ಬಿಬಿಎಂಪಿ ಮತ್ತಿತರೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಸಂಘಟಿಸಲು ಮುಂದಾಗಿದ್ದಾರೆ.
ಅದರಲ್ಲೂ ಬಿಜೆಪಿಯ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದಲ್ಲೇ ಜೆಡಿಎಸ್‌ನಲ್ಲಿದ್ದ ಆಯನೂರು ಮಂಜುನಾಥ್, ಇದೀಗ ಶ್ರೀಕಾಂತ್ ಮುಂಬರುವ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಮತ್ತಷ್ಟು ಮುಖಂಡರನ್ನು ಕಾಂಗ್ರೆಸ್‌ನತ್ತ ಸೆಳೆಯಲು ಡಿ.ಕೆ. ಶಿವಕುಮಾರ್ ಕಾರ್ಯತಂತ್ರ ರೂಪಿಸಿದ್ದು ಈ ನಿಟ್ಟಿನಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಎಂ. ಶ್ರೀಕಾಂತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಇಂದು ಬೇಟಿ ಮಾಡಿದ್ದ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ನಾಗೇಶ್, ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷರು ಮತ್ತು ಕೆಪಿಸಿಸಿ ಸಂಯೋಜಕ ಆರ್. ಮೋಹನ್, ಬೊಮ್ಮನಹಳ್ಳಿ ಕಾಂಗ್ರೆಸ್ ಮುಖಂಡ ದಾಸ್ ಉಪಸ್ಥಿತರಿದ್ದರು.