ಶಿವಮೊಗ್ಗ,ಮಾ.೧: ಅಧಿಕಾರಕ್ಕೆ ಬಂದು 10 ತಿಂಗಳಾಗುತ್ತ ಬಂದರೂ ಟೇಕ್‌ಆಪ್ ಆಗಿಲ್ಲ ಹಾಗೂ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲತೆ ಕಂಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಆರೋಪಿಸಿದರು.
ಅವರು ಇಂದು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದ್ದು, ಕುಡಿಯುವ ನೀರಿಗೂ ಸಹ ಹಾಹಾಕಾರ ಎದ್ದಿದೆ. ತೋಟದ ಬೆಳೆಗಳಿಗೆ ನೀರು ಕೊರತೆಯಿಂದಾಗಿ ತೋಟಗಳು ನಾಶವಾಗುತ್ತಿವೆ ಎಂದರು.
ಇಲ್ಲಿಯವರೆಗೂ ರಾಜ್ಯದಲ್ಲಿ ೮೭೫ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ನೀರಿನ ಕೊರತೆ ಇದ್ದರೂ ಸಹ ತಮಿಳುನಾಡಿಗೆ ಕಾವೇರಿ ನೀರನ್ನು ಕದ್ದುಮುಚ್ಚಿ ಬಿಡುಗಡೆ ಮಾಡಲಾಗುತ್ತಿದೆ. ಶುದ್ದ ನೀರಿನ ಘಟಕಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ರೈತ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಕಳೆದ ಸಾಲಿನಲ್ಲಿ ೧೧೫೦೦ ಕೋಟಿ ರೂ. ಹಾಗೂ ಪ್ರಸಕ್ತ ಸಾಲಿನ ೧೪ ಸಾವಿರ ಕೋಟಿ ರೂ. ಈ ಸಮುದಾಯಗಳಿಗೆ ಇದುವರೆಗೂ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಪರಿಶಿಷ್ಟ ಜಾತಿ, ಪಂಗಡಗಳ ವಿರೋಧಿ ಧೋರಣೆಯನ್ನು ಸರ್ಕಾರ ಅನುಸರಿಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಶಕ್ತಿ ಸೌಧದ ಒಳಗಡೆ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ಇದುವರೆಗೂ ಬಂಧಿಸಿಲ್ಲ. ರಾಷ್ಟ್ರೀಯತೆ ವಿರೋಧಿ ಕ್ರಮಕ್ಕೆ ಗಮನಹರಿಸದೇ ಮುಸ್ಲಿಮರ ಓಲೈಕೆ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತುಷ್ಠೀಕರಣದ ರಾಜಕಾರಣ ಮಾಡುತ್ತಿದೆ. ಇದು ಹಿಂದೂ ವಿರೋಧಿ ಸರ್ಕಾರವಾಗಿದೆ. ಬಿಜೆಪಿಯನ್ನು ಸೋಲಿಸುವ ಏಕೈಕ ದೃಷ್ಟಿಯಿಂದ ಇಂಡಿಯಾ ಸಂಘಟನೆ ಮಾಡಿರುವ ಕಾಂಗ್ರೆಸ್ ಈಗ ಅದು ನುಚ್ಚು ನೂರಾಗಿದೆ. ಭಾರತ ದೇಶವನ್ನು ಇಬ್ಭಾಗ ಮಾಡುವ ಹೇಳಿಕೆಗಳನ್ನು ಕಾಂಗ್ರೆಸ್ ಪಕ್ಷದ ಸಂಸದ ನೀಡಿದ್ದಾರೆ ಎಂದರು.
ರಾಜ್ಯ ಸರ್ಕಾರ ತನ್ನ ಪೈಫಲ್ಯಗಳನ್ನು ಮರೆ ಮಾಚಲು ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸುತ್ತಿದೆ ಎಂದ ಅವರು ಕಾಂಗ್ರೆಸ್ ಸರ್ಕಾರ ದಮನಕಾರಿ ನೀತಿ ಅನುಸರಿಸುತ್ತಿದೆ. ಪಕ್ಷದ ಹೈಕಮಾಂಡ್ ಓಲೈಸುವ ದೃಷ್ಟಿಯಿಂದ ಕಾಟಾಚಾರದ ಆಡಳಿತ ನಡೆಯುತ್ತಿದೆ ಎಂದು ದೂರಿದರು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ವಿಶ್ವದಲ್ಲೇ ೫ನೇ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಭಾರತ ಹೊರ
ಹೊಮ್ಮಿದೆ. ಶೀಘ್ರದಲ್ಲೇ ೩ನೇ ಸ್ಥಾನಕ್ಕೆ ಗುರಿ ತಲುಪಲಿದೆ ಎಂದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ೫ ಸ್ಥಳಗಳನ್ನು ಗುರುತಿಸಿ ಕೇಂದ್ರ ಸರ್ಕಾರ ಅಭಿವೃದ್ಧಿ ಮಾಡಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ಮಾಲತೇಶ್, ಚಂದ್ರಶೇಖರ್, ವಿನ್ಸೆಂಟ್ ರೋಡ್ರಿಗಸ್, ಹೃಷಿಕೇಶ್ ಪೈ, ಕೆ.ವಿ. ಅಣ್ಣಪ್ಪ ಉಪಸ್ಥಿತರಿದ್ದರು.