ಶಿವಮೊಗ್ಗ,ಜು.೨೯:ಭದ್ರಾ ಡ್ಯಾಂನಿಂದ ಇಂದಿನಿಂದಲೇ ನಾಲೆಗಳಿಗೆ ನೀರು ಬಿಡಲು ತೀರ್ಮಾನ ಮಾಡಲಾಗಿದೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ಅವರು ಇಂದು ಕಾಡಾ ಕಚೇರಿಯಲ್ಲಿ ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಬಾರಿ ಬರಗಾಲದಿಂದ ತತ್ತರಿಸಿ ಹೋಗಿದ್ದೆವು. ಈ ಬಾರಿ ಜಿಲ್ಲೆಯ ಎಲ್ಲಾ ಡ್ಯಾಂಗಳು ಭರ್ತಿಯಾಗುವ ಹಂತಕ್ಕೆ ತಲುಪಿವೆ.

ಕೆಲವೊಂದು ಪ್ರದೇಶಗಳಿಗೆ ಈ ಬಾರಿಯೂ ನೀರು ತಲುಪಿಲ್ಲ ಎಂದು ರೈತರು ಆರೋಪಿಸಿದ ಹಿನ್ನಲೆಯಲ್ಲಿ ಇಂದಿನಿಂದಲೇ ನಿರಂತರವಾಗಿ ನೀರು ಬಿಡಲು ತೀರ್ಮಾನಿಸಲಾಗಿದೆ. ರೈತರ ಜೊತೆ ಈಗಾಗಲೇ ಚರ್ಚೆ ಮಾಡಿದ್ದೇವೆ.

ಅನೇಕ ಕಡೆ ಭತ್ತವನ್ನು ನಿಲ್ಲಿಸಿ ಅಡಿಕೆ ಬೆಳೆಯಾಕಿದ್ದಾರೆ. ಬೇಸಿಗೆಯಲ್ಲಿ ಅಡಿಕೆಗೆ ಹೆಚ್ಚು ನೀರು ಬೇಕಾಗುತ್ತದೆ. ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ನೀರಾವರಿ ಇಂಜಿನಿಯರ್‌ಗಳು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದರು.

ಚಾನಲ್‌ನಿಂದ ಅನಧಿಕೃತ ಪಂಪ್‌ಸೆಟ್‌ಗಳ ಮೂಲಕ ನೀರು ಪಡೆಯುತ್ತಿದ್ದು, ಅದನ್ನು ನಿಲ್ಲಿಸಲು ಆ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದೇವೆ. ನೀರು ಪೋಲಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ ಎಂದರು.

ತುಂಗೆಯಿಂದ ಭದ್ರೆಗೆ ನೀರು ಹರಿಸುವ ಯೋಜನೆ ಕೂಡ ಮುಂದಿನ ಭಾಗದಲ್ಲಿ ಕೈಗೆತ್ತಿಕೊಳ್ಳುತ್ತೇವೆ. ಇದಕ್ಕೆ ಕೋಟ್ಯಾಂತರ ರೂ. ಬೇಕಾಗಿದೆ. ಅದಕ್ಕಾಗಿ ನೀರಾವರಿ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದೇವೆ. ಅವರು ೧೫ ದಿನದೊಳಗೆ ಶಿವಮೊಗ್ಗಕ್ಕೆ ಆಗಮಿಸಿ ಒಂದು ದಿನ ಪೂರ್ತಿ ನಮ್ಮದೊಂದಿಗೆ ಇದ್ದು, ಇಲ್ಲಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ ಎಂದರು.

ಕರ್ನಾಟಕದ ನೀರಾವರಿ ನಿಗಮದಿಂದ ಎಲ್ಲಾ ಶಾಸಕರ ಕ್ಷೇತ್ರಕ್ಕೆ ನೀರಾವರಿಗೆ ಮೊದಲ ಆದ್ಯತೆ ನೀಡಿ ಹೆಚ್ಚಿನ ಹಣ ಬಿಡುಗಡೆಗೆ ಈಗಾಗಲೇ ಡಿಸಿಎಂ ತೀರ್ಮಾನಿಸಿದ್ದಾರೆ. ಮಳೆಗೆ ಅನುಗುಣವಾಗಿ ಬೆಳೆಗೆ ತೊಂದರೆಯಾಗದ ರೀತಿಯಲ್ಲಿ ನೀರು ಬಿಡಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಸಲಹ ಸಮಿತಿಯಲ್ಲಿ ತೀರ್ಮಾನಿಸಿದಂತೆ ನೀರು ಬಿಡಲಾಗುವುದು ಎಂದರು.

ಈ ಸಂದರ್ಭದಲ್ಲಿ  ಕಾಡಾ ಅಧ್ಯಕ್ಷ ಡಾ. ಅಂಶುಮಾನ್, ಶಾಸಕರಾದ ಶಾರದ ಪರ‍್ಯನಾಯ್ಕ್, ಹರೀಶ್, ಬಲ್ಕಿಶ್‌ಬಾನು, ಶಾಂತನಗೌಡ, ಬಸವರಾಜ್,ಮಾಜಿ ಶಾಸಕ ಆರ್.ಪ್ರಸನ್ನಕುಮಾರ್, ರೈತ ನಾಯಕರಾದ ಹೆಚ್.ಆರ್.ಬಸವರಾಜಪ್ಪ, ಕೆ.ಟಿ.ಗಂಗಾಧರ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ಕುಮಾರ್ ಹಾಗೂ ಕಾಡಾದ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!