ಸೊರಬ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಶಾಸಕ ಎಸ್. ಕುಮಾರ್ ಬಂಗಾರಪ್ಪ ಕೊರೋನಾ ಲಸಿಕೆ ಪಡೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಕೊರೋನಾ ಲಸಿಕೆಯ ವಿರುದ್ಧ ಯಾವುದೇ ಮೌಢ್ಯತೆ ಸಲ್ಲದು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ದೇಶದ ಹಲವಾರು ಗಣ್ಯರು ಈಗಾಗಲೇ ಲಸಿಕೆ ಪಡೆದಿದ್ದಾರೆ. ಪ್ರತಿಯೊಬ್ಬರು ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆದ ತಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳುವ ಜೊತೆಗೆ ತಮ್ಮ ಕುಟುಂಬ ಹಾಗೂ ಸಮಾಜದ ಸುರಕ್ಷತೆ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದರು.


ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ತಾಲ್ಲೂಕಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ೪೫ ವರ್ಷ ಮೇಲ್ಪಟ್ಟವರು ಭಯಬಿಟ್ಟು ಎಲ್ಲರೂ ಲಸಿಕೆ ಪಡೆಯಬೇಕು. ಲಸಿಕೆ ಪಡೆದರೂ ಸಹ ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಕೈಗಳ ಸ್ವಚ್ಛತೆ ಬಗ್ಗೆ ಗಮನ ನೀಡಬೇಕು. ಈ ಹಿಂದೆ ಪೊಲೀಯೋವನ್ನು ದೇಶದಿಂದ ನಿರ್ಮೂಲನೆ ಮಾಡಿದಂತೆ ಕೊರೋನಾವನ್ನು ಸಹ ನಿರ್ಮೂಲನೆ ಮಾಡಲು ಪ್ರತಿಯೊಬ್ಬರು ಪಣ ತೊಡಬೇಕು ಎಂದು ತಿಳಿಸಿದರು.
ಪುರಸಭೆ ಅಧ್ಯಕ್ಷ ಎಂ.ಡಿ. ಉಮೇಶ್, ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್, ಟಿ.ಆರ್. ಸುರೇಶ್, ಶಿವಕುಮಾರ್ ಕಡಸೂರು, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಕ್ಷತಾ ವಿ. ಖಾನಾಪುರ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ವೇತಾ, ಹಿರಿಯ ಆರೋಗ್ಯ ಸಹಾಯಕಿ ಸಾವಿತ್ರಮ್ಮ, ಇತರರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!