ಅಬ್ಬಲಗೆರೆಯಲ್ಲಿ ಗಾಂಧಿ ಜಯಂತಿ ಆಚರಣೆ
ಶಿವಮೊಗ್ಗ, ಅ.02:
ದೇಶದ ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಕ್ರಿಯ ಸಹಭಾಗಿತ್ವ ಅಗತ್ಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು.
ಅವರು ಇಂದು ಅಬ್ಬಲಗೆರೆ ಪಂಚಾಯತ್‍ನಲ್ಲಿ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.
ಜನರ ಭಾಗವಹಿಸುವಿಕೆಯಿಂದ ಮಾತ್ರ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹಲವಾರು ಜನರ ಕೇಂದ್ರಿತವಾದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಸರ್ಕಾರ ಜಾರಿಗೊಳಿಸುವ ಯೋಜನೆಗಳ ಅನುಷ್ಟಾನದಲ್ಲಿ ಜನರು ಸಹ ಜವಾಬ್ದಾರಿ ವಹಿಸಿಕೊಳ್ಳಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಲ್ಲಿನ ಜನರೇ ಗ್ರಾಮಕ್ಕೆ ಅವಶ್ಯವಾದ ಯೋಜನೆಗಳನ್ನು ಗುರುತಿಸಿ, ಅನುಷ್ಟಾನಗೊಳಿಸುವ ಕಾರ್ಯಕ್ರಮವನ್ನು ಇಂದಿನಿಂದ ಆರಂಭಿಸಲಾಗಿದೆ ಎಂದರು.
ಗಾಂಧಿ ಜಯಂತಿ ದಿನದಂದು ಗ್ರಾಮೀಣ ಭಾಗದ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತಿದೆ. ಮಹಿಳೆಯರ ಮತ್ತು ದುರ್ಬಲ ವರ್ಗದವರ ರಕ್ಷಣೆಗಾಗಿ ದೌರ್ಜನ್ಯದಿಂದ ಮುಕ್ತಿ ಕಾರ್ಯಕ್ರಮದ ಅಡಿಯಲ್ಲಿ ಮುಂದಿನ 10ತಿಂಗಳ ಕಾಲ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ತರಬೇತಿ ಹಾಗೂ ಅರಿವು ಮೂಡಿಸುವ ಕಾರ್ಯ ನಡೆಸಲಾಗುವುದು. ಗ್ರಾಮ ಪಂಚಾಯತ್ ಸದಸ್ಯರು, ವಿವಿಧ ಸ್ವಸಹಾಯ ಗುಂಪುಗಳ ಸದಸ್ಯೆಯರಿಗೆ ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು ಎಂದರು.
ಸ್ವಾತಂತ್ರ್ಯದ 75ನೇ ವರ್ಷಾಚರಣೆ ಅಂಗವಾಗಿ ರಾಜ್ಯದ 750 ಗ್ರಾಮ ಪಂಚಾಯತ್‍ಗಳಲ್ಲಿ `ಅಮೃತ ಗ್ರಾಮ’ ಯೋಜನೆ ಅನುಷ್ಟಾನಗೊಳಿಸಲಾಗುತ್ತಿದೆ. ಜಿಲ್ಲೆಯ 32 ಗ್ರಾಮ ಪಂಚಾಯತ್‍ಗಳಲ್ಲಿ ಈ ಯೋಜನೆ ಜಾರಿಯಾಗಲಿದೆ. ಈ ಗ್ರಾಮ ಪಂಚಾಯತ್‍ಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ 25ಲಕ್ಷ ರೂ. ಅನುದಾನ ಒದಗಿಸಲಿದೆ. ಪ್ರತಿಯೊಂದು ಮನೆಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಜಲಜೀವನ ಮಿಷನ್ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.
ಸ್ವಚ್ಛ ಭಾರತ ಯೋಜನೆಯನ್ನು ಜಿಲ್ಲೆಯಾದ್ಯಂತ ಅನುಷ್ಟಾನಗೊಳಿಸಲಾಗುತ್ತಿದೆ. ಪ್ರತಿಯೊಂದು ಮನೆಗೆ ಶೌಚಾಲಯವನ್ನು ನಿರ್ಮಿಸಿ ಬಯಲು ಶೌಚಮುಕ್ತ ಗ್ರಾಮಗಳನ್ನು ರೂಪಿಸಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿಯೊಂದು ಕುಟುಂಬಕ್ಕೆ ವರ್ಷಕ್ಕೆ 100ದಿನಗಳ ಕೂಲಿ ಕೆಲಸ ಒದಗಿಸಲಾಗುತ್ತಿದೆ ಎಂದರು.
ಶಾಸಕ ಅಶೋಕ ನಾಯ್ಕ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷ ಅಣ್ಣಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಯೋಜನಾ ನಿರ್ದೇಶಕಿ ನಂದಿನಿ ಅವರು ಸ್ವಾಗತಿಸಿದರು. ದ್ರಾಕ್ಷಾಯಿಣಿ ಮತ್ತು ಸಂಗಡಿಗರು ಗಾಂಧಿ ಭಜನೆ ಹಾಡಿದರು. ಅರ್ಹ ಫಲಾನುಭವಿಗಳಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ಮತ್ತು ಸ್ವಚ್ಛತಾ ಕಾರ್ಮಿಕರಿಗೆ ಗೌರವವನ್ನು ಸಚಿವರು ಈ ಸಂದರ್ಭದಲ್ಲಿ ಸಲ್ಲಿಸಿದರು.