ಶಿವಮೊಗ್ಗ,
ಹರ್ ಘರ್ ತಿರಂಗ್ ಅಭಿಯಾನದ ಅಡಿಯಲ್ಲಿ ಆಗಸ್ಟ್13 ರಿಂದ15 ರವರೆಗೆ ಜಿಲ್ಲೆಯ ಎಲ್ಲಾ ಮನೆ, ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಹರ್ ಘರ್ ತಿರಂಗ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿ ಸಲು ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಿದರು.

ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ ಪ್ರತಿ ಮನೆ ಮನೆಯಲ್ಲೂ ಆಗಸ್ಟ್ ೧೩ರಿಂದ ೧೫ರವರೆಗೆ ರಾಷ್ಟ್ರಧ್ವಜವನ್ನು ಹಾರಿಸಿ, ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಗೊಳಿಸಲು ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗಾ’ ಘೋಷವಾಕ್ಯದಡಿ ಅಭಿಯಾನಕ್ಕೆ ಕರೆ ನೀಡಿದೆ.

ಇದರಂತೆ ಜಿಲ್ಲೆಯ ಪ್ರತಿ ಮನೆಗಳ, ಸರ್ಕಾರಿ ಕಚೇರಿ ಕಟ್ಟಡಗಳು, ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ರಾಷ್ಟ್ರಪ್ರೇಮದ ಪ್ರದರ್ಶನದ ಸಂಕೇತವಾದ ಈ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಅಭಿಯಾನವನ್ನು ಯಶಸ್ವಿ ಯಾಗಿ ನೆರವೇರಿಸಲು ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ವ್ಯವಸ್ಥಿತವಾಗಿ ಪ್ರತಿಯೊಂದು ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಲು ಪ್ರೇರಣೆ ನೀಡುವ ಕಾರ್ಯ ಮಾಡಲಾಗಿದೆ.

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಯೋಜನಾ ನಿರ್ದೇಶಕ ಕರಿಭೀಮಣ್ಣ ಮೂಕಪ್ಪನವರ್ ಇದ್ದರು.