ಶಿವಮೊಗ್ಗ, ಅ.19: ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಅವರು ಸೋಮವಾರ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಆರಂಭದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3200 ಮೀಟರಿಗೆ ಹೆಚ್ಚಿಸಲು ಈಗಾಗಲೇ ಅನುಮೋದನೆ ನೀಡಲಾಗಿದೆ. ಇದಕ್ಕೆ ಹೆಚ್ಚುವರಿಯಾಗಿ 75 ಕೋಟಿ ರೂಪಾಯಿಯನ್ನು ಮುಂದಿನ ಬಜೆಟ್ ನಲ್ಲಿ ಮಂಜೂರು ಮಾಡಲಾಗುವುದು.

ವಿಮಾನ ನಿಲ್ದಾಣ ಕುರಿತು ಸಿಎಂ ಮಾತುಕತೆ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕೇಂದ್ರ ಸರಕಾರದ ಉಡಾನ್ ಯೋಜನೆ ವ್ಯಾಪ್ತಿಯಲ್ಲಿ ಒಳಪಡಿಸುವ ಕುರಿತು ಈಗಾಗಲೇ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಇದರಿಂದ ಜನಸಾಮಾನ್ಯರಿಗೂ ಸಹ ವಿಮಾನಯಾನ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು.

ವಿಮಾನ ನಿಲ್ದಾಣ ಕಾಮಗಾರಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯಿಂದ ಭೂಮಿ ಕಳೆದುಕೊಂಡ ಪ್ರತಿಯೊಬ್ಬರಿಗೂ ಸಮರ್ಪಕವಾದ ಪರಿಹಾರವನ್ನು ಒದಗಿಸಲಾಗುವುದು ಎಂದರು.

ವಿಮಾನ ನಿಲ್ದಾಣ ಸ್ಥಾಪನೆಯಿಂದಾಗಿ ಶಿವಮೊಗ್ಗ ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಅಭಿವೃದ್ಧಿಗೆ ವೇಗ ದೊರಕುವುದನ್ನು ನಿರೀಕ್ಷಿಸಲಾಗಿದೆ. ಈ ಭಾಗದಲ್ಲಿ ಹೆಚ್ಚಿನ ಕೈಗಾರಿಕೆಗಳನ್ನು ಆರಂಭಿಸಲು ಇದು ಪೂರಕವಾಗಲಿದೆ ಎಂದು ಹೇಳಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾದಿಕಾರಿ ಶಿವಕುಮಾರ್, ಎಸ್ಪಿ ಶಾಂತರಾಜು , ಸೂಡಾ ಅಧ್ಯಕ್ಷ ಜ್ಯೋತಿ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

You missed

error: Content is protected !!