ಶಿವಮೊಗ್ಗ: ಮಾದಕ ಪದಾರ್ಥಗಳ ಉತ್ಪಾದನೆ, ಸಾಗಾಟ, ಮಾರಾಟ, ವಿತರಣೆ ಹಾಗೂ ಇದರ ದುರ್ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಾರ್ವಜನಿಕರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಮಾದಕ ವಸ್ತುಗಳ ನಿಯಂತ್ರಣದ ಕುರಿತಾಗಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮಾದಕ ವಸ್ತುಗಳಿಂದಾಗುವ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಬಗ್ಗೆ ವಿವಿಧ ಇಲಾಖೆಗಳ ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವಂತೆ ಅವರು ಸಲಹೆ ನೀಡಿದರು.
ಶಾಲಾ-ಕಾಲೇಜುಗಳಲ್ಲಿ ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳು ಮಾದಕ ಪದಾರ್ಥಗಳ ಸೇವನೆಯಲ್ಲಿ ತೊಡಗಿದ್ದರೆ ಮಾಹಿತಿ ನೀಡಬೇಕು. ಇದರ ವಿತರಣೆ ಮತ್ತು ಸರಬರಾಜು ಆಗುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ಮಾಹಿತಿ ನೀಡಬೇಕು ಇದರ ಬಗ್ಗೆ ಆಯಾ ಶಾಲಾ-ಕಾಲೇಜುಗಳ ಪ್ರಾಂಶುಪಾಲರಿಂದ ಮಾಹಿತಿ ಪಡೆಯಬೇಕು ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲೆಯ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಗಾಂಜಾ ಬೆಳೆ ಬೆಳೆದ ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಲಾಗಿದೆ. ವಿಶೇಷವಾಗಿ ಶಿಕಾರಿಪುರ, ಸೊರಬ, ಆನವಟ್ಟಿ, ಶಿರಾಳಕೊಪ್ಪ, ಕುಂಸಿ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ ಗ್ರಾಮಾಂತರ, ರಿಪ್ಪನ್‌ಪೇಟೆ, ಸಾಗರ ಗ್ರಾಮಾಂತರ ಹಾಗೂ ಹೊಸನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಗಾಂಜಾ ಅಕ್ರಮ ಸಾಗುವಳಿಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಗಣಿಸಿದ್ದು, ಅದರ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ಹಾಗೂ ನಿಗಾ ವಹಿಸಲು ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದವರು ತಿಳಿಸಿದರು.
ಈ ಭಾಗಗಳ ಅರಣ್ಯ ಪ್ರದೇಶಗಳಲ್ಲಿ ಅರಣ್ಯಕ್ಕೆ ಹೊಂದಿಕೊಂಡಂತಿರುವ ಜಮೀನುಗಳಲ್ಲಿ, ಅಕ್ರಮವಾಗಿ ಸಾಗುವಳಿ ಮಾಡುತ್ತಿರುವ ಜಮೀನುಗಳಲ್ಲಿ ಶುಂಠಿ, ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳೊಂದಿಗೆ ಸಾಗುವಳಿ ಮಾಡುತ್ತಿರುವುದನ್ನು ಗುರುತಿಸಿ, ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದ ಅವರು, ಪ್ರಕರಣಗಳನ್ನು ನಿರಂತರವಾಗಿ ದಾಖಲಿಸುತ್ತಿರುವುದರಿಂದ ಗಾಂಜಾ ಅಕ್ರಮ ಸಾಗುವಳಿಯ ಪ್ರಮಾಣ ಕಡಿಮೆಯಾಗಿದೆ ಎಂದರು.
ಶಾಲಾ-ಕಾಲೇಜುಗಳಲ್ಲಿ ಮಾದಕ ಪದಾರ್ಥ ದುರ್ಬಳಕೆಯ ಕುರಿತಾಗಿ ಜಾಗೃತ ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಗಾಂಜಾ ಅಕ್ರಮ ಸಾಗುವಳಿ ಮಾಡುತ್ತಿರುವ ಪ್ರದೇಶಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಹಾಗೂ ಜಿಲ್ಲೆಯಲ್ಲಿನ ಮಾದಕ ವ್ಯಸನ ವಿಮುಕ್ತಿ ಮತ್ತು ಪುನರ್ವಸತಿ ಕೇಂದ್ರಗಳ ಉಸ್ತುವಾರಿ ವಹಿಸುವ ಬಗ್ಗೆಯೂ ಅವರು ಸೂಚಿಸಿದರು.
ಈ ಕಾರ್ಯದಲ್ಲಿ ಶಿಕ್ಷಣ, ಅರಣ್ಯ, ಕಂದಾಯ, ಆರೋಗ್ಯ, ಔಷಧ ನಿಯಂತ್ರಣ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದಲ್ಲಿ ಜವಾಭ್ದಾರಿಯರಿತು ಕಾರ್ಯನಿರ್ವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್‌ಸುರಗೀಹಳ್ಳಿ, ಔಷಧ ನಿಯಂತ್ರಣಾಧಿಕಾರಿ ಡಾ|| ವೀರೇಶ್‌ಬಾಬು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.