ಶಿವಮೊಗ್ಗ: ನಿರಂತರ ಒತ್ತಡದ ಕೆಲಸದಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮಾನಸಿಕ ಮತ್ತು ಶಾರೀರಿಕ ಸದೃಢತೆ ಕಾಪಾಡಿಕೊಳ್ಳಲು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದು ಅತಿ ಮುಖ್ಯ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ.
ಅವರು ಇಂದು ಜವಹಾರಲಾಲ್ ನೆಹರು ರಾಷ್ಟ್ರೀಯ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ಕಂದಾಯ ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಹಮ್ಮಿಕೊಂಡಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.
ನಿರಂತರವಾಗಿ ಸರ್ಕಾರಿ ನೌಕರರು ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಇವತ್ತಿನ ಸನ್ನಿವೇಶದಲ್ಲಿ ಸಹಜವಾಗಿ ಅನಾರೋಗ್ಯದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅನಾರೋಗ್ಯವಾದಲ್ಲಿ ದೇಹ ಮತ್ತು ಮನಸ್ಸಿನ ಮೇಲೆ ಪರಿಣಾಮ ಬೀರುವುದರಿಂದ ಕೆಲಸದ ಮೇಲೂ ಆಸಕ್ತಿ ಇರುವುದಿಲ್ಲ. ಈ ಕಾರಣಕ್ಕಾಗಿ ಯೋಗ, ಧ್ಯಾನ ಮತ್ತು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಮತ್ತು ದೈಹಿಕ ಕ್ಷಮತೆ ವೃದ್ಧಿಸುತ್ತದೆ. ಎಲ್ಲಾ ನೌಕರರಿಗೂ ಈ ಕ್ರೀಡಾಕೂಟದಿಂದ ಯಶಸ್ಸು ಸಿಗಲಿ ಎಂದು ಹಾರೈಸಿದರು.
ಉಪವಿಭಾಗಾಧಿಕಾರಿ ಪ್ರಕಾಶ್, ಕಂದಾಯ ನೌಕರ ಸಂಘದ ಅಧ್ಯಕ್ಷ ಅರುಣ್ ಸೇರಿದಂತೆ ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.