ಶಿವಮೊಗ್ಗ : ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಅವರು ಭಾನುವಾರ ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಜಂಟಿ ಸಹಯೋಗದಲ್ಲಿ ಆಯೋಜಿಸಿದ್ದ `ಜ್ಞಾನ ದೀವಿಗೆ’ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆಯ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಅಂತರ್ಜಾಲ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ವ್ಯಾಸಾಂಗಕ್ಕೆ ಅಡ್ಡಿಯುಂಟಾಗಿರುವುದು ಸರ್ಕಾರದ ಗಮನದಲ್ಲಿದೆ. ಅಂತಹ ವಿದ್ಯಾರ್ಥಿಗಳಿಗೆ ನೆರವು ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಈ ಕಾರ್ಯಕ್ರಮಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು ಒದಗಿಸಲಾಗುವುದು. ಖಾಸಗಿ ಸಂಸ್ಥೆಗಳು ಈ ರೀತಿಯ ಕಾರ್ಯಕ್ರಮಗಳಲ್ಲಿ ಸರ್ಕಾರದದೊಂದಿಗೆ ಕೈಜೋಡಿಸಬೇಕು ಎಂದು ಅವರು ಹೇಳಿದರು.
ಕೋವಿಡ್‍ನಿಂದಾಗಿ ಶಿಕ್ಷಣ ಕ್ಷೇತ್ರ ಸೇರಿದಂತೆ ರಾಜ್ಯದ ಆರ್ಥಿಕತೆಗೆ ತೀವ್ರ ಹಿನ್ನಡೆ ಉಂಟಾಗಿದೆ. ಸರ್ಕಾರ ಈಗಾಗಲೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಆನ್‍ಲೈನ್ ಶಿಕ್ಷಣ ಸೇರಿದಂತೆ ಪರ್ಯಾಯ ಕ್ರಮಗಳನ್ನು ಕೈಗೊಂಡಿದೆ. ಇದೀಗ ಜ್ಞಾನ ದೀವಿಗೆ ಕಾರ್ಯಕ್ರಮದಡಿಯಲ್ಲಿ ರಾಜ್ಯದ 2.68ಲಕ್ಷ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದು, ರಾಜ್ಯದ ಎಲ್ಲಾ 30ಜಿಲ್ಲೆಗಳಲ್ಲಿ ಕಾರ್ಯಕ್ರಮ ಜಾರಿಯಾಗಲಿದೆ ಎಂದರು.
ಜನರಲ್ಲಿ ಅರಿವು ಮೂಡಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ಕೋವಿಡ್‍ನಿಂದ ಪಾರಾಗಲು ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.
ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಮತ್ತಿತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!