ಶಿವಮೊಗ್ಗ,ಆ.13:

ಅಸಂಘಟಿತ ಕಾರ್ಮಿಕರು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸಂಘದ ಉಪಾಧ್ಯಕ್ಷ, ಖ್ಯಾತ ಉದ್ಯಮಿ ಹರ್ಷ ಕಾಮತ್ ಹೇಳಿದ್ದಾರೆ.


ಅವರು ವಿನೋಬನಗರದ ವಿಧಾತ್ರಿ ಭವನದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಎರಡನೇ ರಾಜ್ಯ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು.
ಅಸಂಘಟಿತ ಕಾರ್ಮಿಕರು ಅವರ ವೃತ್ತಿಯ ಬಗ್ಗೆ ಕೀಳರಿಮೆ ಬಿಡಬೇಕು. ಸಂಘ ಅವರಲ್ಲಿರುವ ಕೀಳರಿಮೆ ಹೋಗಲಾಡಿಸಿ ಅವರಿಗೆ ಆತ್ಮಸ್ಥೈರ್ಯ ತುಂಬಬೇಕು. ಈ ವೇದಿಕೆ ಮೂಲಕ ಅವರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದರು.
ಈ ಕ್ಷೇಮಾಭಿವೃದ್ಧಿ ಸಂಘ ಅಸಂಘಟಿತ ಕಾರ್ಮಿಕರ ಸಮಸ್ಯೆಗಳನ್ನು ದೂರ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಮತ್ತು ಇದು ದೇಶಕ್ಕೆ ಮಾದರಿಯಾಗಬೇಕು. ಸಾಮಾಜಿಕ ಭದ್ರತೆ ನೀಡಬೇಕು. ಈ ನಿಟ್ಟಿನಲ್ಲಿ ಇಂದಿನ ಸಭೆ ಮಾದರಿಯಾಗಬೇಕು ಎಂದರು.
ಸರ್ಕಾರ ಕೂಡ ಕಣ್ಣು ಕಿವಿ ತೆರೆದು ಅಸಂಘಟಿತ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಈ ನಿಟ್ಟಿನಲ್ಲಿ ಈ ಸಭೆ ಯಶಸ್ವಿಯಾಗಲಿ ಎಂದು ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಮಾತನಾಡಿ, ದೇಶದ ಮತ್ತು ರಾಜ್ಯದ ಅಭಿವೃದ್ಧಿಯಲ್ಲಿ ಅಸಂಘಟಿತ ಕಾರ್ಮಿಕರ ಕೊಡುಗೆ ಅಪಾರ. ಎಲ್ಲಾ ಕ್ಷೇತ್ರಗಳಲ್ಲೂ ಅಸಂಘಟಿತ ಕಾರ್ಮಿಕರು ಅಪಾರ ಕೊಡುಗೆ ನೀಡಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಮತ್ತು ವೃತ್ತಿ ಭದ್ರತೆ ನೀಡುವಲ್ಲಿ ಸರ್ಕಾರ ಮತ್ತು ಸಂಘಟನೆ ಕೈಜೋಡಿಸಬೇಕು ಎಂದರು.
ಸಂಘದ ಅಧ್ಯಕ್ಷ ಕುಪೇಂದ್ರ ಆಯನೂರು, ಜಿಲ್ಲಾಧ್ಯಕ್ಷೆ ಸುರೇಖಾ ಪಾಲಾಕ್ಷಪ್ಪ, ಕಾರ್ಯದರ್ಶಿ ಪ್ರದೀಪ್ ಹೊನ್ನಪ್ಪ, ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಂಘದ ಪದಾಧಿಕಾರಿಗಳು, ರಾಜ್ಯ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!