: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತ್ವರಿತವಾಗಿ ಮುಗಿಸಿ ಗ್ರಾಮಗಳಿಗೆ ಶುದ್ದ ಕುಡಿಯುವ ನೀರು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಧಿಕಾರಿಗಳಿಗೆ ಮನವಿ ಮಾಡಿದರು.

ತಾಲ್ಲೂಕಿನ ತಾಳಗುಪ್ಪ ಹೋಬಳಿಯ ತಾಳಗುಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಬಹುಗ್ರಾಮ ಕುಡಿಯುವ ನೀರಿನ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡುತ್ತಿದ್ದರು.

ತಾಳಗುಪ್ಪ ಹೋಬಳಿಯ ೨೮ ಗ್ರಾಮಗಳಿಗೆ ಶುದ್ದ ಕುಡಿಯುವ ನೀರು ಪೂರೈಕೆಯಾಗಬೇಕು. ಶರಾವತಿ ಹಿನ್ನೀರು ಸಾಗರಕ್ಕೆ ಹೋಗುವ ಮಾರ್ಗಮಧ್ಯದಲ್ಲಿ ಬರುವ ಗ್ರಾಮಗಳಿಗೆ ನೀರು ಪೂರೈಕೆ ಮಾಡಬೇಕು ಎನ್ನುವ ಉದ್ದೇಶದಿಂದ ಯೋಜನೆಗೆ ಹೆಚ್ಚಿನ ಹಣ ಬಿಡುಗಡೆ ಮಾಡಿಸಲಾಗಿತ್ತು. ಆದರೆ ಕಾಮಗಾರಿ ವಿಳಂಬವಾಗುತ್ತಿದ್ದು ಅಧಿಕಾರಿಗಳು ತ್ವರಿತವಾಗಿ ಮುಗಿಸುವತ್ತ ಗಮನ ಹರಿಸಿ ಎಂದರು.

ಕಾಮಗಾರಿಗೆ ಬೇಕಾದ ವಿದ್ಯುತ್ ಪೂರೈಕೆ ಮಾಡಲು ಮೆಸ್ಕಾಂಗೆ ೨೭ ಲಕ್ಷ ರೂ. ಪಾವತಿ ಮಾಡಬೇಕಾಗಿದ್ದು, ತಕ್ಷಣ ಹಣ ಬಿಡುಗಡೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ. ವಿದ್ಯುತ್ ಸಂಪರ್ಕ ಕಲ್ಪಿಸಿದರೆ ಕಾಮಗಾರಿ ಬಹುತೇಕ ಮುಗಿಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಶಾಸಕರಿಗೂ ತಿಳಿಸಲಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಗುರುಕೃಷ್ಣ ಶೆಣೈ, ತಾಳಗುಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷ ಲಕ್ಷ್ಮೀನಾರಾಯಣ ಬ್ಯಾಕೋಡು, ಪ್ರಮುಖರಾದ ಮಾರುತಿ ಶಿರವಂತೆ, ಮನೋಜ್ ಜನ್ನೆಹಕ್ಲು, ಕನ್ನಪ್ಪ, ರಾಘವೇಂದ್ರ ಕುಮಾರ್, ಶಿವನಗೌಡ ಇನ್ನಿತರರು ಹಾಜರಿದ್ದರು.