ಸಾಗರ : ಜಗತ್ತಿನಲ್ಲಿಯೆ ಭಾರತ ಸಂವಿಧಾನ ಅತ್ಯಂತ ಶ್ರೇಷ್ಟವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿ ನಿಲ್ಲಲ್ಲು ಡಾ. ಬಿ.ಆರ್. ಅಂಬೇಡ್ಕರ್ ನೀಡಿರುವ ಸಂವಿಧಾನವೇ ಪ್ರಮುಖ ಕಾರಣ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.


ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.


ಸಂವಿಧಾನ ನಮಗೆ ಸಮಾನತೆ, ಸಹೋದರತ್ವದಂತಹ ಮಹತ್ವದ ಸಂದೇಶವನ್ನು ನೀಡಿದೆ. ನಾವು ಸಂವಿಧಾನದ ಅರಿವು ಹೊಂದದೆ ಹೋದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರದ ಯಶಸ್ವಿ ಪ್ರಜೆಗಳಾಗಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂವಿಧಾನ ಪೀಠಿಕೆ ಓದುವ ಮಹತ್ವದ ಯೋಜನೆ ಜಾರಿಗೆ ತಂದು ಪ್ರತಿಯೊಬ್ಬರೂ ಸಂವಿಧಾನದ ಮಹತ್ವ ಅರಿತುಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದೆ. ಯುವಸಮೂಹ ಸಂವಿಧಾನದ ಆಶಯಕ್ಕೆ ತಕ್ಕಂತೆ ಬದುಕು ಕಟ್ಟಿಕೊಳ್ಳಬೇಕು ಎಂದು ಕರೆ ನೀಡಿದರು.


ಸಂವಿಧಾನ ಕುರಿತು ವಿಶೇಷ ಉಪನ್ಯಾಸ ನೀಡಿದ ಪತ್ರಕರ್ತ ಎಂ.ರಾಘವೇಂದ್ರ, ಸಂವಿಧಾನ ಭಾರತದ ಪವಿತ್ರ ಗ್ರಂಥವಾಗಿದೆ. ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವ ಸಂವಿಧಾನದ ಅಡಿಗಲ್ಲಾಗಿದೆ. ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಕಾರ್ಯಕ್ರಮ ಸಂವಿಧಾನದ ಪ್ರಮುಖ ಅಂಶಗಳಲ್ಲಿ ಒಂದಾಗಿದ್ದು, ಸಂವಿಧಾನದ ವಿರುದ್ದ ಮಾತನಾಡಿದರೆ ಅದು ಭಾರತದ ವಿರುದ್ದ ಮಾತನಾಡಿದಂತೆ. ಸನಾತನ ಧರ್ಮದ ಬಗ್ಗೆ ಮಾತನಾಡಿದರೆ ಅವರ ವಿರುದ್ದ ಪ್ರತಿಭಟನೆ ನಡೆಯುತ್ತದೆ.

ಆದರೆ ಸಂವಿಧಾನವನ್ನೇ ಬದಲಾಯಿಸುವ ಹೇಳಿಕೆ ನೀಡಿದವರ ವಿರುದ್ದ ಧ್ವನಿ ಎತ್ತದೆ ಇರುವುದು ದುರದೃಷ್ಟಕರ ಸಂಗತಿ. ಬದಲಾದ ದಿನಮಾನಗಳಲ್ಲಿ ಯುವಮನಸ್ಸುಗಳಲ್ಲಿ ಜಾತಿಯ ವಿಷಬೀಜ ಬಿತ್ತಿ ಲಾಭ ಪಡೆಯುವ ಹುನ್ನಾರ ನಡೆಯುತ್ತಿದೆ. ದೇಶದಲ್ಲಿ ಲೋಕಸಭೆ, ವಿಧಾನಸಭೆ, ಪ್ರಧಾನ ಮಂತ್ರಿಗಳು, ರಾಷ್ಟ್ರಪತಿಗಳಿಗಿಂತ ಸಂವಿಧಾನವೇ ಶ್ರೇಷ್ಟವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಪೌರಾಯುಕ್ತ ಎಚ್.ಕೆ.ನಾಗಪ್ಪ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ನಾಗೇಶ್ ಬ್ಯಾಲಾಳ್, ಉಪ ತಹಶೀಲ್ದಾರ್ ಕಲ್ಲಪ್ಪ ಮೆಣಸಿನಾಳ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಪರಮೇಶ್ವರಪ್ಪ ಇನ್ನಿತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣಾಧಿಕಾರಿ ಸುರೇಶ್ ಸಹಾನೆ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮ್ ಸಂವಿಧಾನ ಪೀಠಿಕೆ ಬೋಧಿಸಿದರು. ವಿ.ಟಿ.ಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

By admin

ನಿಮ್ಮದೊಂದು ಉತ್ತರ

error: Content is protected !!