ಶಿವಮೊಗ್ಗ, ನ.05 ಶಿವಮೊಗ್ಗ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಎಂದಿನಂತೆ ಈ ಬಾರಿಯೂ ನವಂಬರ್ 4ರಂದು ಮಠದ ವಾರ್ಷಿಕೋತ್ಸವ,  ಶಾಲಾ — ಕಾಲೇಜಿನ ವಾರ್ಷಿಕೋತ್ಸವ ಹಾಗೂ ನ.6 ರಂದು ಉಪನ್ಯಾಸ ಮಾಲೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಧರ್ಮದ ಸಮಗ್ರ ಚಿಂತನೆಗೆ ಸೂಕ್ತ ವೇದಿಕೆಯನ್ನು ಕಲ್ಪಿಸಿಕೊಡುವ ಚಿಂತನೆ ಶ್ರೀ ಆದಿಚುಂಚನಗಿರಿ ಅಂಗಳದಲ್ಲಿ ಮೂಡಿದೆ.

 ಯುಗ ಯೋಗಿ ಪದ್ಮಭೂಷಣ ಪುರಸ್ಕೃತ ಪರಮಪೂಜ್ಯ ಜಗದ್ಗುರು  ಡಾ. ಬಾಲ ಗಂಗಾಧರನಾಥ ಮಹಾ ಸ್ವಾಮೀಜಿಯವರ ದಿವ್ಯಾನುಗ್ರಹದೊಂದಿಗೆ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ  ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ದಿವ್ಯ ಸತ್ಸಂಗ, ಧರ್ಮ ಸಂಕಥನ ಹಾಗೂ ಸಾಧಕರಿಗೆ ಸನ್ಮಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ನವೆಂಬರ್ 4 ರಂದು ಸಂಜೆ 5.30 ಗಂಟೆಗೆ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಶಾಲಾ ಕ್ರೀಡಾಂಗಣದಲ್ಲಿ  ಶಾಲಾ – ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ  ಉದ್ಘಾಟನೆ ಪರಮಪೂಜ್ಯ ಶ್ರೀಗಳ ಸಮ್ಮುಖದಲ್ಲಿ ನಡೆಯಲಿದೆ. ಅಂದು ವಿಶೇಷ ಆಹ್ವಾನಿತರಾಗಿ ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ  ಸಚಿವರಾದ ಮಧು ಬಂಗಾರಪ್ಪ, ಶಿವಮೊಗ್ಗ ಶಾಸಕರಾದ ಚನ್ನಬಸಪ್ಪ, ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ಕಾರ್ಯಕ್ರಮದಲ್ಲಿ  ಭಾಗವಹಿಸಲಿದ್ದಾರೆ. ಅಂದು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾನ್ವಿತರಿಗೆ, ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ಅಂತರ್ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಪ್ರತಿಭಾನ್ವಿತರಿಗೆ ಗೌರವಿಸಲಾಗುವುದು.

ನವಂಬರ್ 5 ರಂದು ಬೆಳಿಗ್ಗೆ 07 ಗಂಟೆಗೆ ಶರಾವತಿ ನಗರದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ  ಪೂಜ್ಯ ಶ್ರೀಗಳ ಸಾನ್ನಿಧ್ಯದಲ್ಲಿ  ಹೋಮ – ಹವನ ಮತ್ತು ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು.

ನ.6 ರಂದು ಬೆಳಿಗ್ಗೆ 10 ಗಂಟೆಗೆ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಅಂದು ಪೂಜ್ಯ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ, ಜಿಲ್ಲಾ ರಕ್ಷಣಾಧಿಕಾರಿಗಳಾದ ಮಿಥುನ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.  ಇದೇ ಸಂದರ್ಭದಲ್ಲಿ  ಸನಾತನ ಧರ್ಮ ಅರಿವು ಮತ್ತು ಅನುಸಂಧಾನ ವಿಷಯದ ಕುರಿತು ಹಿರಿಯ ವಾಗ್ಮಿ ಸೂರ್ಯ ಹೆಬ್ಬಾರ್ ಉಪನ್ಯಾಸ ನೀಡಲಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಹಾಗೂ ಪಿ. ಎಚ್. ಡಿ ಪದವಿ ಪಡೆದ  ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಗೆ  ಪೂಜ್ಯರಿಂದ ಸನ್ಮಾನಿಸುವ ಕಾರ್ಯಕ್ರಮ ನಡೆಯುವುದು. ಕಾರ್ಯಕ್ರಮಕ್ಕೆ ಸರ್ವರನ್ನು ಸ್ವಾಗತಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

By admin

ನಿಮ್ಮದೊಂದು ಉತ್ತರ

error: Content is protected !!