ಸಾಗರ : ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಮತ್ತು ರಾಜ್ಯ ಸರ್ಕಾರ ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ, ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ನ. ೨೬ರಿಂದ ೨೮ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ೭೨ ಗಂಟೆಗಳ ಮಹಾಧರಣಿ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಮಹಾಧರಣಿಗೆ ಹಲವು ಸಂಘಟನೆಗಳು ಬೆಂಬಲ ನೀಡಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ರೈತ ಕಾರ್ಮಿಕರು, ವಿವಿಧ ಸಾಮಾಜಿಕ ಸಂಘಟನೆಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು.
ನವದೆಹಲಿಯಲ್ಲಿ ರೈತರು ನಿರಂತರ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ೭೦ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ರೈತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು.
ಈತನಕ ಎಲ್ಲ ಬೆಳೆಗಳಿಗೆ ಕನಿಷ್ಟ ಬೆಂಬಲಬೆಲೆ ನೀಡಬೇಕು ಎನ್ನುವ ರೈತರ ಬೇಡಿಕೆ ಈಡೇರಿಲ್ಲ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಸಹ ರೈತ ವಿರೋಧಿ ಕಾಯ್ದೆ ಜಾರಿಗೆ ತಂದಿತ್ತು. ಅದನ್ನು ವಾಪಾಸ್ ಪಡೆಯುವುದಾಗಿ ಹಾಲಿ ಕಾಂಗ್ರೇಸ್ ಸರ್ಕಾರ ಭರವಸೆ ನೀಡಿತ್ತು. ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ನಮ್ಮ ಬೇಡಿಕೆ ಈಡೇರಿಸಿಲ್ಲ ಎಂದು ದೂರಿದರು.
ಪ್ರಮುಖವಾಗಿ ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ, ಗೋಹತ್ಯಾ ನಿಷೇಧ ಕಾಯ್ದೆ ರದ್ದುಪಡಿಸಬೇಕು. ವಿದ್ಯುತ್ ಖಾಸಗೀಕರಣ ಕಾಯ್ದೆಯನ್ನು ವಾಪಾಸ್ ಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ೭೨ ಗಂಟೆಗಳ ಮಹಾಧರಣಿ
ನಡೆಸಲಾಗುತ್ತಿದ್ದು, ರೈತರು, ಕಾರ್ಮಿಕರು, ಸಾಮಾಜಿಕ ಸಂಘಟನೆಗಳ ಪ್ರಮುಖರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು. ಗೋಷ್ಟಿಯಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಬಿ.ಮಂಜಪ್ಪ ಹಿರೇನೆಲ್ಲೂರು ಉಪಸ್ಥಿತರಿದ್ದರು