ಶಿವಮೊಗ್ಗ : ಜೀವನವಾಗಲಿ ಕ್ರೀಡೆಯಾಗಲಿ ಎದುರಾಗುವ ಸೋಲುಗಳು ಹೊಸತನದ ಚಿಂತನೆಗಳಿಗೆ ಪೂರಕವಾಗಲಿ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು.
ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ, ಕುವೆಂಪು ವಿಶ್ವವಿದ್ಯಾಲಯ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಸೋಲು ಮತ್ತು ಗೆಲುವು ಬದುಕಿನ ಸಾಮಾನ್ಯ ಸಂಗತಿಗಳು. ಕ್ರೀಡೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಪ್ರತಿಯೊಂದು ಸೋಲುಗಳನ್ನು ಸ್ಪರ್ಧಾತ್ಮಕ ಸ್ಪೂರ್ತಿಯಿಂದ ಎದುರಿಸುವ ಆತ್ಮವಿಶ್ವಾಸ ನೀಡಲಿದೆ. ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಜ್ವಲಿಸಲಿ ಎಂದು ಶುಭ ಹಾರೈಸಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಮನುಷ್ಯನ ದೈಹಿಕ ಹಾಗೂ ಮಾನಸಿಕ ಸಧೃಡತೆಗೆ ಕ್ರೀಡೆ ಅತ್ಯಗತ್ಯ. ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ನಿಮ್ಮನ್ನು ಸೃಜನಶೀಲಗೊಳಿಸುವ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ.ಎನ್.ಡಿ.ವಿರೂಪಾಕ್ಷ, ಕ್ರೀಡಾಕೂಟ ಸಂಚಾಲಕರಾದ ಪ್ರೊ.ಕೆ.ಎಂ.ನಾಗರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಮೂರು ದಿನಗಳ ಕ್ರೀಡಾಕೂಟದಲ್ಲಿ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ 87 ಪದವಿ ಕಾಲೇಜುಗಳ ಸುಮಾರು 800 ಕ್ಕು ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, 28 ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ.