ಶಿವಮೊಗ್ಗ : ಮಾರ್ಚ್ ೧೬ : ರಾಜ್ಯದಲ್ಲಿ ಏಪ್ರಿಲ್ ೨೬ ಮತ್ತು ಮೇ ೦೭ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ ಎಂದು ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಶಿವಮೊಗ್ಗ ಜಿಲ್ಲಾ ಲೋಕಸಭಾ ಕ್ಷೇತ್ರಕ್ಕೆ ಮೇ ೦೭ರಂದು ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ನೀತಿಸಂಹಿತೆ ಜಾರಿಗೆ ಬಂದಿರುವುದಾಗಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು.


ಅವರ ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು. ಈ ಚುನಾವಣೆಗೆ ಏಪ್ರಿಲ್ ೧೨ರಿಂದ ೧೯ರವರೆಗೆ ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೩ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗುವುದು. ಏಪ್ರಿಲ್ ೨೦ರಂದು ನಾಮಪತ್ರಗಳ ಪರಿಶೀಲನೆ, ಏ.೨೨ರಂದು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನವಾಗಿರಲಿದೆ. ಅಂತಿಮವಾಗಿ ಮೇ ೦೭ರಂದು ಮತದಾನ ಪ್ರಕ್ರಿಯೆ ನಡೆದು, ಮೇ ೦೬ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯು ರೂ.೨೫,೦೦೦ರೂ.ಗಳ ಭದ್ರತಾ ಠೇವಣಿಯನ್ನು ಪರಿಶಿಷ್ಟ ಅಭ್ಯರ್ಥಿಗಳಾಗಿದ್ದಲ್ಲಿ ರೂ.೧೨,೫೦೦ರೂ.ಗಳ ಭದ್ರತಾ ಠೇವಣಿಯನ್ನು ಇರಿಸಬೇಕಾಗುವುದು. ಅಭ್ಯರ್ಥಿಯು ಚುನಾವಣಾ ವೆಚ್ಚ ರೂ.೯೫,೦೦೦ಗಳ ವರೆಗೆ ವೆಚ್ಚ ಮಾಡಲು ಹಾಗೂ ಅಭ್ಯರ್ಥಿಯು ೪ನಾಮಪತ್ರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.


ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ೮೫೨೧೦೭ ಪುರುಷ ಮತ್ತು ೮೭೭೭೬೧ ಮಹಿಳಾ ಮತದಾರರು ಹಾಗೂ ೩೩ ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು ೧೭೨೯೯೦೧ ಮತದಾರರು ಇರಲಿದ್ದಾರೆ. ಇವರಲ್ಲಿ ೧೮-೧೯ವರ್ಷದೊಳಗಿನ ಹಾಗೂ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಸುಮಾರು ೨೯,೭೮೮ ಯುವ ಮತದಾರರಿದ್ದಾರೆ. ೮೫+ ವಯಸ್ಸಿನ ೧೫,೩೧೫ ಮತ್ತು ವಿಕಲಚೇತನ

೧೮,೮೮೮ಮತದಾರರು ಈ ಪಟ್ಟಿಯಲ್ಲಿ ಸ್ಥಾನಪಡೆದಿದ್ದಾರೆ ಎಂದರು. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಣೆಗಾಗಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಒಟ್ಟು ೨೦೩೯ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ೮೬೦೦ಸಿಬ್ಬಂಧಿಗಳ ಸೇವೆಯನ್ನು ಚುನಾವಣೆಗಾಗಿ ಬಳಸಿಕೊಳ್ಳಲಾಗುತ್ತಿದೆ. ಅಲ್ಲದೇ ಚುನಾವಣಾ ಕಾರ್ಯಕ್ಕೆ ನಿಯೋಜಿಸುವ ಅಧಿಕಾರಿ-ಸಿಬ್ಬಂಧಿಗಳಿಗೆ ಈಗಾಗಲೇ ವಿವಿಧ ಹಂತದಲ್ಲಿ ತರಬೇತಿ ನೀಡಲಾಗಿದೆ ಎಂದರು.
ಬೈಂದೂರು ಸೇರಿದಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ೨೦೩೯ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಅವುಗಳಲ್ಲಿ ೩೨೫ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ನಿರ್ವಹಣೆಗಾಗಿ ಅಗತ್ಯ ಸಿಬ್ಬಂಧಿಗಳನ್ನು ನಿಯೋಜಿಸಲಾಗಿದೆ ಎಂದ ಅವರು, ಕೇವಲ ರಾಜಕೀಯ ಪಕ್ಷಗಳ ಮುಖಂಡರು ಮಾತ್ರವಲ್ಲದೇ ಸಾರ್ವಜನಿಕರೂ ಕೂಡ ಚುನಾವಣಾ ಆಯೋಗದ ನೀತಿ-ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿರ್ಲಕ್ಷಿಸಿದಲ್ಲಿ ಅನಿವಾರ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.


ಜಿಲ್ಲೆಯಲ್ಲಿ ಯುವ ಮತದಾರರು ಅದರಲ್ಲೂ ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು, ಯಾವುದೇ ಆಮಿಷಕ್ಕೆ ಒಳಗಾಗದೇ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಪ್ರತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಮತಗಟ್ಟೆಗಳಲ್ಲಿ ೦೫ಸಖಿ ಮತಗಟ್ಟೆಗಳನ್ನು, ಯುವ ಮತದಾರರು ಹೆಚ್ಚಿರುವಲ್ಲಿ ೦೧ವಿಶೇಷ ಮತಗಟ್ಟೆಯನ್ನು ಸ್ಥಾಪಿಸಲಾಗುವುದು ಅಲ್ಲದೇ ಸ್ಥಳೀಯ ವಿಶೇಷತೆಗಳನ್ನು ಒಳಗೊಂಡಂತೆ ಒಂದು ಮತಗಟ್ಟೆಯನ್ನು ತೆರೆಯಲಾವುದು. ಕ್ಷೇತ್ರದ ವ್ಯಾಪ್ತಿಯಲ್ಲಿ ಕಂಡುಬರುವ ಯಾವುದೇ ಚುನಾವಣಾ ಅಕ್ರಮ, ಒತ್ತಡ, ಆಮಿಷ ಮುಂತಾದವು ಕಂಡುಬಂದಲ್ಲಿ ಸಾರ್ವಜನಿಕರು ಸಿವಿಜಲ್ ಅಪ್ ಮೂಲಕ ದೂರನ್ನು ದಾಖಲಿಸಿದಲ್ಲಿ, ಈ ದೂರನ್ನು ಗಂಭೀರವಾಗಿ ಪರಿಗಣಿಸಿ ಕೆಲವೇ ಗಂಟೆಗಳ ಅವಧಿಯಲ್ಲಿ ಅಕ್ರಮ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಇದರೊಂದಿಗೆ ಮತದಾರರ ಅನುಕೂಲಕ್ಕಾಗಿ ದಿನದ ೨೪ಗಂಟೆಯೂ ’೧೯೫೦’ ಸಹಾಯವಾಣಿ ಕಾರ್ಯನಿರ್ವಹಿಸಲಿದೆ ಎಂದರು.


ಈ ಚುನಾವಣೆಯ ವ್ಯವಸ್ಥಿತ ನಿರ್ವಹಣೆಗಾಗಿ ಹಲವು ತಂಡಗಳನ್ನು ರಚಿಸಲಾಗಿದ್ದು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮಾಧ್ಯಮಗಳಲ್ಲಿ ಪ್ರಕಟಗೊಳಿಸುವ ಯಾವುದೇ ಜಾಹಿರಾತು, ಪಾವತಿಸುವ ಸುದ್ದಿ ಮುಂತಾದವುಗಳನ್ನು ಪ್ರಕಟಿಸುವ ಮುನ್ನ ನಿಯಮಾನುಸಾರ ಅನುಮತಿ ಪಡೆದುಕೊಳ್ಳುವಂತೆ ಹಾಗೂ ಊರಿಂದೂರಿಗೆ ಪ್ರಯಾಣಿಸುವ ಸಂದರ್ಭದಲ್ಲಿ ೫೦,೦೦೦ಕ್ಕಿಂತ ಹೆಚ್ಚಿನ ಹಣ ಇಟ್ಟುಕೊಂಡಿದ್ದಲ್ಲಿ ಅಗತ್ಯ ದಾಖಲೆಗಳನ್ನು ಹೊಂದಿರಬೇಕು. ಒಂದು ಲಕ್ಷಕ್ಕೂ ಹೆಚ್ಚಿನ ಹಣ ದೊರೆತಲ್ಲಿ ಆದಾಯ ತೆರಿಗೆ ಇಲಾಖಾಧಿಕಾರಿಗಳ ತನಿಖೆಗೆ ಶಿಫಾರಸ್ಸು ಮಾಡಲಾಗುವುದು ಎಂದವರು ತಿಳಿಸಿದರು.


ಸಾರ್ವಜನಿಕರು ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳ ಮುಖಂಡರು ಬಹಿರಂಗ ಸಭೆ, ಸಮಾರಂಭಗಳನ್ನು ಆಯೋಜಿಸುವವರ ಅನುಕೂಲಕ್ಕಾಗಿ ಕೋರಿಕೆಗೆ ಅನುಮತಿ ನೀಡಲು ಏಕಗವಾಕ್ಷಿ ಪದ್ದತಿಯಲ್ಲಿ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು.
ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಖಾತ್ರಿ ಪಡಸಿಕೊಳ್ಳುವಂತೆ ಹಾಗೂ ಈವರೆಗೆ ಹೆಸರು ಸೇರ್ಪಡೆಗೊಳಿಸಿಕೊಳ್ಳದಿರುವವರು ತಮ್ಮ ಹೆಸರನ್ನು ಸೇರ್ಪಡೆಗೊಳಿಸಿಕೊಳ್ಳಲು ಏಪ್ರಿಲ್ ೧೪ರವರೆಗೆ ಅವಕಾಶ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರು ಮಾತನಾಡಿ, ಚುನಾವಣಾ ಕಾರ್ಯಕ್ಕೆ ಸುಮಾರು ೩೦೦೦ಕ್ಕೂ ಹೆಚ್ಚಿನ ಹೆಚ್ಚಿನ ಪೊಲೀಸ್ ಹಾಗೂ ಗೃಹರಕ್ಷಕ ಸೇವೆಯನ್ನು ಹಾಗೂ ಪ್ಯಾರಾ ಮಿಲಿಟರಿ ತುಕಡಿಗಳ ಸೇವೆಯನ್ನು ಬಳಸಿಕೊಳ್ಳಲಾಗುವುದು. ಈಗಾಗಲೇ ೧೫೦೦ರೌಡಿ ಶೀಟರ್‌ಗಳ, ಗೂಂಡಾಗಳ ಮೇಲೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈಲ್ಲೆಯಲ್ಲಿ ಸಾರ್ವಜನಿಕರು ಹೊಂದಿರುವ ಶಸ್ತ್ರಾಸ್ತ್ರಗಳನ್ನು ಡಿಪಾಜಿಟ್ ಮಾಡುವಂತೆಯೂ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಸೇರಿದಂತೆ ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿ-ಸಿಬ್ಬಂಧಿಗಳು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!