ಶಿವಮೊಗ್ಗ, ಏಪ್ರಿಲ್ 16
ವಿವಿಧ ಕೋರ್ಸುಗಳಿಗೆ ಏ.18 ಮತ್ತು 19 ರಂದು ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಶಾಂತಿಯುತವಾಗಿ ಹಾಗೂ ಸುವ್ಯಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಡಿಡಿಪಿಯು ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಏ.15 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2024 ನೇ ಸಾಲಿಗೆ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟÀರ್ನರಿ, ಯೋಗ ಮತ್ತು ನ್ಯಾಚುರೋಪತಿ, ಬಿಎಸ್ಸಿ(ನರ್ಸಿಂಗ್) ಫಾರ್ಮಸಿ ಮುಂತಾದ ಕೋರ್ಸ್ಗಳಿಗೆ ಪ್ರವೇಶಾತಿ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಏ.18 ಮತ್ತು 19 ರಂದು ಬೆಳಿಗ್ಗೆ 10.30 ರಿಂದ 11.50 ಹಾಗೂ ಮಧ್ಯಾಹ್ನ 2.30 ರಿಂದ 3.50 ರವರೆಗೆ ನಡೆಸಲಿದೆ.
ಶಿವಮೊಗ್ಗ ನಗರದಲ್ಲಿ 20 ಪರೀಕ್ಷಾ ಕೇಂದ್ರಗಳು, ಭದ್ರಾವತಿ 04 ಮತ್ತು ಸಾಗರದ 02 ಪರೀಕ್ಷಾ ಕೇಂದ್ರ ಸೇರಿ ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಮೂರು ಜನ ಅಧಿಕಾರಿಗಳನ್ನೊಳಗೊಂಡ ತ್ರಿಸದಸ್ಯ ಸಮಿತಿಯನ್ನು ಹಾಗೂ ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ವೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಮಾರ್ಗಾಧಿಕಾರಿಗಳು, ಇತರೆ ಅಧಿಕಾರಿಗಳನ್ನು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳಾದ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರು, ಸಿಸಿಟಿವಿ, ಇತರೆ ವ್ಯವಸ್ಥೆಗಳನ್ನು ಮಾಡಲು ಸೂಚಿಸಿ, ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಲು ಸೂಚಿಸಿದರು.
ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿದ್ದು ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಪರೀಕ್ಷೆ ಬರೆಯುವ ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಹಾಗು ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ಒದಗಿಸಲು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುವುದು.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಹಾಗೂ ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ, ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಹಾಗೂ ವಿವಿಧ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ ಎಂದು ಸೂಚನೆಗಳನ್ನು ನೀಡಿದರು.
ಪರೀಕ್ಷಾ ಕಾರ್ಯಗಳಿಗೆ ನಿಯೋಜನೆಗೊಂಡ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ, ಡಿಹೆಚ್ಓ ಡಾ.ನಟರಾಜ್, ಪೊಲೀಸ್ ಅಧಿಕಾರಿ ಅನಸೂಯ ಹಾಗೂ ಪರೀಕ್ಷೆಗೆ ನಿಯೋಜಿಸಲಾದ ಅಧಿಕಾರಿಗಳು ಹಾಜರಿದ್ದರು.