ಶಿವಮೊಗ್ಗ: ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ ₹1ಲಕ್ಷ,ರೈತರ ಸಾಲ ಮನ್ನಾ, ಸೇರಿದಂತೆ ಇನ್ನೂ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು‌.

ತಾಲ್ಲೂಕಿನ ಸಿದ್ಲೀಪುರ, ಸನ್ಯಾಸಿ ಕೊಡಮಗ್ಗಿ, ಮುಂಗೋಟೆ, ಆನವೇರಿ, ನಿಂಬೆಗೊಂದಿ, ಸೈದರ ಕಲ್ಲಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಅಧಿಕಾರ ಕೈಲಿದ್ದಾಗ ಕ್ಷೇತ್ರದ ಅಭಿವೃದ್ಧಿ ವಿಚಾರದ ಕುರಿತ ಧ್ವನಿ ಎತ್ತದ ಕೆಲವರು ನನ್ನ ಬಗ್ಗೆ ಟೀಕಿಸುತ್ತಿದ್ದಾರೆ. ಇದೆಲ್ಲದಕ್ಕೂ ಮುಂದಿನ ದಿನದಲ್ಲಿ ಉತ್ತರ ನೀಡಲಾಗುತ್ತದೆ. ಅದಕ್ಕೆ, ಮತದಾರರು ನನಗೆ ಬೆಂಬಲ ನೀಡಬೇಕು ಎಂದರು.

ಎಲ್ಲಾ ತಾಲ್ಲೂಕಿನ ಪ್ರತಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನ ಸಾಮಾನ್ಯರಿಗೆ ಕಾರ್ಯಕರ್ತರು ತಲುಪಿಸುತ್ತಿದ್ದಾರೆ‌. ಇದಕ್ಕೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಮಾತನಾಡಿ, ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್‌ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗಳನ್ನು ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ ಮರೆತಿಲ್ಲ. ಆದರೆ, 10 ವರ್ಷದಲ್ಲಿ ಬಿಜೆಪಿ ಏನು ಮಾಡಿದೆ’ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ಮುಖಂಡ ಶ್ರೀನಿವಾಸ ಕರಿಯಣ್ಣ ಮಾತನಾಡಿ, ಜಿಲ್ಲೆಯ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಬೇಕು. ಇಲ್ಲಿ, ಕ್ಷೇತ್ರದ ಜನರ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿದರು.

ನಟ ಶಿವರಾಜಕುಮಾರ್, ನಿಗಮದ ಅಧ್ಯಕ್ಷ ರವಿಕುಮಾರ್, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ವಿಜಯ್ ಕುಮಾರ್ ಸಂತೇಕಡೂರು, ಜಿಲ್ಲಾ ಪಂಚಾಯಿತಿ ಸದಸ್ಯ ಶಾಂತಕುಮಾರ್ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಹನುಮಂತು, ಟಿ.ನೇತ್ರಾವತಿ, ದೇವಿ ಕುಮಾರ್ ಸೇರಿ ಕಾರ್ಯಕರ್ತರು ಉಪಸ್ಥಿತರಿದ್ದರು.

By admin

ನಿಮ್ಮದೊಂದು ಉತ್ತರ

error: Content is protected !!