ಸೊರಬ,ಜ.08:
ಗ್ರಾಮ ಪಂಚಾಯಿತಿ ಸದಸ್ಯರಿಗೆ ಗುರುವಾರ ನೀಡಿದ ತರಬೇತಿ ಕಾರ್ಯಾಗಾರದಲ್ಲಿ ಶಿಷ್ಟಾಚಾರ ಪಾಲಿಸದೇ ತಾಲ್ಲೂಕು ಪಂಚಾಯಿತಿ ಇಒ ನಂದಿನಿ ಉದ್ಧಟತನ ತೋರಿದ್ದಾರೆ. ಅವರ ವಿರುದ್ಧ ಸರ್ಕಾರ ಕ್ರಮ ಜರುಗಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಯನಾ ಹೆಗಡೆ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿ ಸದಸ್ಯರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ತರಬೇತಿ ನಡೆಸುವ ಕುರಿತು ಯಾವುದೇ ಲಿಖಿತ ಆದೇಶವಿಲ್ಲದಿದ್ದರೂ ಕಾರ್ಯನಿರ್ವಾಹಣಾಧಿಕಾರಿ ನಂದಿನಿ ಅವರು ರಾಜಕೀಯ ಒತ್ತಡಕ್ಕೆ ಮಣಿದು ಯಾವುದೇ ಜನಪ್ರತಿನಿಧಿಗಳಿಗೆ ಮಾಹಿತಿ ನೀಡದೇ ಕಾರ್ಯಾಗಾರ ನಡೆಸಿದ್ದಾರೆ. ಮೇಲಧಿಕಾರಿಗಳು ಕೂಡಲೇ ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.
ಆನವಟ್ಟಿಯಲ್ಲಿ ಹಾದುಹೋದ ಹೆದ್ದಾರಿಯ ಬೀದಿ ದೀಪಗಳ ಅಳವಡಿಕೆಗೆ ಸಂಸದರು ₹ 2.5 ಕೋಟಿ ಅನುದಾನ ನೀಡಿದ್ದಾರೆ. ಜೊತೆಗೆ ತಾಲ್ಲೂಕಿನ ಅಭಿವೃದ್ಧಿಗೆ ಮುಖ್ಯಮಂತ್ರಿ, ಸಂಸದರು ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ. ಆದರೆ ಅಧಿಕಾರಿಗಳು ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಪಾಲಿಸದೇ, ಪ್ರತಿನಿಧಿಗಳು ಸೇರಿ ಯಾರಿಗೂ ತಿಳಿಸದೆ ಕಾರ್ಯಕ್ರಮ ನಡೆಸುವ ಮೂಲಕ ಸರ್ಕಾರಕ್ಕೆ, ಮುಖ್ಯಮಂತ್ರಿ ಹಾಗೂ ಸಂಸದರಿಗೆ ಅವಮಾನ ಮಾಡಿದ್ದಾರೆ. ಸಂಬಂಧಿಸಿದ ಇಲಾಖೆ ವಿರುದ್ಧ ಕ್ರಮ ಜರುಗಿಸಬೇಕು. ಸರ್ಕಾರ ಕೋಟ್ಯಾಂತರ ರೂಪಾಯಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನೀಡಿರುವ ಅನುದಾನ ಜನಪ್ರತಿನಿಧಿಗಳಿಗೆ ಹಾಗೂ ಜನರಿಗೆ ತಿಳಿಯಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್, ಸ್ಥಾಯಿ ಸಮಿತಿ ಅಧ್ಯಕ್ಷ ನರೇಂದ್ರ ಒಡೆಯರ್ ಇದ್ದರು.

By admin

ನಿಮ್ಮದೊಂದು ಉತ್ತರ

error: Content is protected !!