ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಪರವಾಗಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಮೇ 2ರ ನಾಳೆ ಮಧ್ಯಾಹ್ನ 12ಕ್ಕೆ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಮಾತನಾಡಲಿದ್ದಾರೆ. ಇದಕ್ಕಾಗಿ ಸಕಲ ಸಿದ್ದತೆ ನಡೆದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ಇಂದು ಫ್ರೀಡಂ ಪಾರ್ಕ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಹುಲ್ಗಾಂಧಿಯವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕಾರ್ಯದರ್ಶಿ ಮಯೂರು ಜಯಕುಮಾರ್ ಹಾಗೂ ಇನ್ನಿತರ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ಸುಮಾರು 1ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಬೈಂದೂರು ಹೊರತು ಪಡಿಸಿ ಜಿಲ್ಲೆಯ ಎಲ್ಲಾ ತಾಲ್ಲೂಕಿನಿಂದಲೂ ಸಹ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.
ಈ ಬಾರಿ ಮತ ಯಾಚನೆಯಲ್ಲಿ ನಮ್ಮ ಬೂತ್ ನಮ್ಮ ಜವಾಬ್ದಾರಿ ಘೋಷ ವಾಕ್ಯದೊಂದಿಗೆ ಎಲ್ಲರೂ ಒಟ್ಟಾಗಿ ಮತಯಾಚಿಸುತ್ತಿರುವುದರಿಂದ ಗೀತಾಶಿವರಾಜ್ಕುಮಾರ್ ಅವರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಹಾಗೆಯೇ ಕೇಂದ್ರದಲ್ಲೂ ಸಹ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದರು.
ನಟ ಶಿವರಾಜ್ಕುಮಾರ್ ಅವರು ಸಹ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಪ್ರವಾಸ ಮಾಡಿ ಮತಯಾಚಿಸಿದ್ದಾರೆ ಎಂದ ಅವರು ಮೇ 4ರಂದು ಶಿಕಾರಿಪುರ, ಶಿರಾಳಕೊಪ್ಪ, ಆನವಟ್ಟಿಯಲ್ಲಿ ರೋಡ್ ಶೋ ಹಾಗೂ ಕಾರ್ನರ್ ಸಭೆ ನಡೆಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮುಖಂಡರಾದ ಕಲಗೋಡು ರತ್ನಾಕರ್, ಎನ್. ರಮೇಶ್, ಸಿ.ಹೆಚ್. ಚಂದ್ರಭೂಪಾಲ್, ಮಂಜುನಾಥ್ ಬಾಬು, ಜಿತೇಂದ್ರಗೌಡ, ಚೇತನ್ ಉಪಸ್ಥಿತರಿದ್ದರು.