ಶಿವಮೊಗ್ಗ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.
ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇಬ್ಬರ ಪರವಾಗಿಯೂ ಶಿವಮೊಗ್ಗದಲ್ಲಿ ಅಬ್ಬರದ ಪ್ರಚಾರ ಮಾಡುತ್ತಿದ್ದೇವೆ. ಇದಕ್ಕಾಗಿ ವಾರ್ಡ್ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಪ್ರತಿ ವಾರ್ಡ್ನಲ್ಲಿರುವ ಮತದಾರರನ್ನು ಗುರುತಿಸಲಾಗಿದೆ. ಮತದಾರರ ಮನೆಗಳಿಗೆ ಹೋಗಿ ಪ್ರಚಾರ ಮಾಡಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದೇವೆ.
ಹಾಗೆಯೇ ಕ್ಷೇತ್ರದಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಉಸ್ತುವಾರಿ ಸಚಿವರಾಗಿರುವ ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿರುವುದರಿಂದ ಈ ಇಬ್ಬರ ಗೆಲುವಿಗೆ ಸಹಕಾರವಾಗುತ್ತದೆ ಎಂದರು.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತವಿಲ್ಲ. ಯಾವುದೇ ಶಾಸನಗಳು ಜಾರಿಯಾಗಬೇಕಾದರೆ ವಿಧಾನ ಪರಿಷತ್ ಒಪ್ಪಿಗೆಯೂ ಬೇಕಾಗುತ್ತದೆ. ಅಲ್ಲಿ ಕಾಂಗ್ರೆಸ್ ಸದಸ್ಯರ ಸಂಖ್ಯೆ ಹೆಚ್ಚಾಗಬೇಕಾಗಿದೆ. ಈ ಬಾರಿ ಆರು ಸದಸ್ಯರನ್ನು ಆಯ್ಕೆ ಮಾಡಬೇಕಾಗಿದೆ. ಈ ಆರು ಜನ ಆಯ್ಕೆಯಾಗುತ್ತಾರೆ ಎಂದರು.
ಆಯನೂರು ಮಂಜುನಾಥ್ ಅವರು ಈಗಾಗಲೇ ಒಂದು ಸುತ್ತು ಕ್ಷೇತ್ರದ ತುಂಬಾ ಪ್ರಚಾರ ಮಾಡಿ ಬಂದಿದ್ದಾರೆ. ಮತದಾರರ ಭೇಟಿಯಾಗುತ್ತಲೇ ಇದ್ದಾರೆ. ಅವರ ಬಗ್ಗೆ ಮತದಾರರಿಗೆ ಅತ್ಯಂತ ವಿಶ್ವಾಸವಿದೆ. ನಾಲ್ಕೂ ಮನೆಗಳಲ್ಲಿ ಕೆಲಸ ಮಾಡಿದ ಅನುಭವ ಅವರಿಗಿದೆ. ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿದೆ. ಹಾಗಾಗಿ ಅವರು ಗೆದ್ದೇ ಗೆಲ್ಲುತ್ತಾರೆ ಮತ್ತು ಶಿಕ್ಷಕ ಕ್ಷೇತ್ರದ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಕೂಡ ಶಿಕ್ಷಕರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಅವರೂ ಕೂಡ ಪ್ರಚಾರದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಪದವೀಧರರ ಮತ್ತು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದೆ. ಈಗಾಗಲೇ ಪದವೀಧರರಿಗೆ ಯುವನಿಧಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಬಂಡಾಯವಾಗಿ ಸ್ಪರ್ಧಿಸಿರುವ ಎಸ್.ಪಿ. ದಿನೇಶ್ ಅವರ ಸ್ಪರ್ಧೆಯಿಂದ ಯಾವುದೇ ತೊಂದರೆಯಾಗುವುದಿಲ್ಲ. ದಿನೇಶ್ ಅವರು ಪಕ್ಷ ಬಿಟ್ಟು ಹೋಗಬಾರದಿತ್ತು. ಅವರಿಗೆ ಈಗಾಗಲೇ ಎರಡು ಬಾರಿ ಅವಕಾಶ ಕೊಟ್ಟಿದ್ದರು. ಮುಂದೆಯೂ ಸ್ಥಾನ ಮಾನ ನೀಡುವ ಭರವಸೆ ಕೂಡ ಕೊಡಲಾಗಿತ್ತು. ಆದರೆ ಅವರು ಬಿಟ್ಟು ಹೋಗಿದ್ದಾರೆ. ಹಾಗೆಯೇ ಬಿಜೆಪಿ ವಿರುದ್ಧವೂ ಕೂಡ ರಘುಪತಿ ಭಟ್ ಬಂಡಾಯವೆದ್ದಿದ್ದಾರೆ. ಇದು ಕಾಂಗ್ರೆಸ್ ಗೆ ಅನುಕೂಲವಾಗಲಿದೆ. ಒಟ್ಟಾರೆ ನಮ್ಮ ಪಕ್ಷದ ಇಬ್ಬರೂ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಟಿ.ಎಸ್. ಚಂದ್ರಶೇಖರ್, ಗ್ಯಾರಂಟಿ ಅನುಷ್ಠಾನದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಪ್ರಮುಖರಾದ ಸೌಗಂಧಿಕಾ, ಹೆಚ್.ಎಂ. ಮಧು, ಜಿ.ಡಿ. ಮಂಜುನಾಥ್, ಚಿನ್ನಪ್ಪ ಮತ್ತಿತರರು ಇದ್ದರು.