ಶಿವಮೊಗ್ಗ,ಅ.14: ಸುಪ್ರೀಂಕೋರ್ಟ್‍ನ ಆದೇಶದಂತೆ ಕರ್ನಾಟಕ ಸರ್ಕಾರ ತಕ್ಷಣವೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಅ.16ರಂದು ಭಾರಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ಜಿಲ್ಲಾ ಶಾಖೆಯಿಂದ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ಸೈನ್ಸ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಮೆರವಣಿಗೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ರಾಜ್ಯ ಉಪಾಧ್ಯಕ್ಷ ತಿಮ್ಲಾಪುರ ಲೋಕೇಶ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಳೆದ 3 ದಶಕಗಳಿಂದ ನಡೆಸಿದ ಒಳಮೀಸಲಾತಿ ಹೋರಾಟದ ಫಲವಾಗಿ ಸುಪ್ರೀಂ ಕೋರ್ಟ್ ನಮ್ಮ ಪರ ತೀರ್ಪುನೀಡಿದ್ದು ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಮೀನಾಮೇಷ ನಡೆಸುತ್ತಿದ್ದು, ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಡಿ.ಎಸ್.ಎಸ್. ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ಸುಪ್ರಿಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ತಕ್ಷಣವೇ ಒಳಮೀಸಲಾತಿ ಜಾರಿಗೊಳಿಸಬೇಕು. ಒಂದು ವೇಳೆ ಜಾರಿಗೊಳಿಸದಿದ್ದಲ್ಲಿ ಸುಪ್ರೀಂ ಕೋರ್ಟ್‍ನ ಆದೇಶ ಉಲ್ಲಂಘಿಸಿರುವುದಕ್ಕೆ ಕಾನೂನು ಹೋರಾಟದ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಹಾಗೂ ಸಚಿವರಿಗೆ ಕಪ್ಪುಬಾವುಟ ಪ್ರದರ್ಶಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಸಿ.ಮೂರ್ತಿ, ರಂಗಪ್ಪ, ಸಿದ್ದಪ್ಪ, ಶಿವಾಜಿ, ಎಸ್.ಶಿವಲಿಂಗಪ್ಪ, ಅಣ್ಣಪ್ಪ ಇನ್ನಿತರರು ಉಪಸ್ಥಿತರಿದ್ದರು.