ಶಿವಮೊಗ್ಗ : ಫೆಬ್ರವರಿ ೧೦ : : ಜಿಲ್ಲೆಯಲ್ಲಿ ಸಣ್ಣ ನೀರಾವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ನೀರಾವರಿ ನಿಗಮ, ನಗರ ಯೋಜನೆ ಪ್ರಾಧಿಕಾರ, ಸ್ಥಳೀಯ ಸಂಸ್ಥೆಗಳು ಹಾಗೂ ಅರಣ್ಯ ಇಲಾಖೆಗಳ ವ್ಯಾಪ್ತಿಗೊಳಪಡುವ ಹಾಗೂ ಕೃಷಿ, ಕುಡಿಯುವ ನೀರು ಮತ್ತು ಗ್ರಾಮೀಣ ಕೈಗಾರಿಕೆಗಳ ಮೂಲಗಳಾಗಿರುವ ಕೆರೆಗಳನ್ನು ಗುರುತಿಸಿ, ಅವುಗಳ ವಾಸ್ತವ ಸ್ಥಿತಿಗತಿ, ಒತ್ತುವರಿ, ಒತ್ತುವರಿ ತೆರವು ಮಾಡಿದ ಕೆರೆಗಳು, ಆಕಾರ, ಚೆಕ್ಕುಬಂದಿ, ಸರ್ವೇ ನಂಬರ್, ಪ್ರದೇಶದ ವಿಸ್ತಾರ ಮತ್ತಿತರ ಪೂರಕ ಹಾಗೂ ನಿಖರವಾದ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ ಕೂಡಲೇ ಒದಗಿಸುವಂತೆ ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಕೆರೆಗಳ ನಿರ್ವಹಣೆ, ರಕ್ಷಣೆ ಮತ್ತು ಅಭಿವೃದ್ಧಿ ಕಾರ್ಯಗಳ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಸಂಬಂಧ ಈಗಾಗಲೇ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರು ವಿಸ್ತೃತ ಮಾಹಿತಿಯನ್ನು ನೀಡುವಂತೆ ಕೋರಿದ್ದು, ಇಲಾಖಾಧಿಕಾರಿಗಳು ಕೂಡಲೇ ಮಾಹಿತಿಯನ್ನು ಒದಗಿಸುವಂತೆ ಅವರು ಸೂಚಿಸಿದರು.
ಕ್ಷೀಣಿಸುತ್ತಿರುವ ಅಂತರ್ಜಲವನ್ನು ಮರುಪೂರಣಗೊಳಿಸುವುದು, ಪರಿಸರಾತ್ಮಕ ಪ್ರಭಾವಗಳ ನಿರ್ಧರಣಾ ಅಧ್ಯಯನ ಸೇರಿದಂತೆ ಅವುಗಳ ವ್ಯವಸ್ಥಿತ ನಿರ್ವಹಣೆ ದೃಷ್ಟಿಯಿಂದ ಸಹಕಾರಿಯಾಗಲಿರುವ ಈ ಮಹತ್ವದ ಕಾರ್ಯಕ್ಕೆ ಸಂಬಂಧಿತ ಇಲಾಖಾಧಿಕಾರಿಗಳು ಕೆರೆಗಳ ಸಮಗ್ರ ಮಾಹಿತಿಯನ್ನು ನೀಡುವಂತೆ ಅವರು ಸೂಚಿಸಿದರು.
ಸ್ಥಳೀಯ ಮತ್ತು ಇತರೆ ಪ್ರಾಧಿಕಾರಿಗಳ ನೆರವಿನೊಂದಿಗೆ ಸಮನ್ವಯತೆ ಸಾಧಿಸಿಕೊಳ್ಳುವ ಮೂಲಕ ಕೆರೆ-ಕಟ್ಟೆಗಳನ್ನು ಸಂರಕ್ಷಿಸುವುದು, ಜೀರ್ಣೋದ್ಧಾರಗೊಳಿಸುವುದು. ಪುನರ್ರೂಪಿಸುವುದು ಮತ್ತು ಮೂಲಸ್ಥಿತಿಗೆ ತರುವಲ್ಲಿ ಸಹಕರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಇರುವ ಭೌಗೋಳಿಕ ಮಾಹಿತಿಯೊಂದಿಗೆ ಕೆರೆಗಳು ಮತ್ತು ಸುತ್ತಮುತ್ತಲ ಪ್ರದೇಶಗಳ ಪರಿಸರಾತ್ಮಕ ಯೋಜನೆ ಮತ್ತು ನಕ್ಷೆಯ ರಚನೆಯಂತೆ ಕೆರೆಗಳ ಸಮಗ್ರ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆಯೂ ಅವರು ಸೂಚಿಸಿದರು.
ಕೆರೆಗಳ ಗಡಿ ಗುರುತಿಸುವುದು, ಒತ್ತುವರಿ ತೆರವುಗೊಳಿಸುವುದು, ರಕ್ಷಣೆ ಮತ್ತು ಅಭಿವೃದ್ಧಿ ಮುಂತಾದ ಮಾಹಿತಿ ನೀಡುವ ಅಧಿಕಾರಿಗಳು ಸರಿಯಾದ ನಿಖರವಾದ ಮಾಹಿತಿಯನ್ನು ನೀಡಬೇಕು. ಈಗಾಗಲೇ ಒತ್ತುವರಿಯನ್ನು ಗುರುತಿಸಿರುವ ಕೆರೆಗಳ ಒತ್ತುವರಿಯನ್ನು ತೆರೆವುಗೊಳಿಸಬೇಕು. ಅಗತ್ಯವಿದ್ದಲ್ಲಿ ಪೊಲೀಸ್ಇಲಾಖೆಯ ಸಹಕಾರವನ್ನು ಪಡೆದುಕೊಳ್ಳಬೇಕು. ಅದಕ್ಕಾಗಿ ಕಾಲಮಿತಿಯನ್ನು ನಿಗಧಿಪಡಿಸಿಕೊಳ್ಳುವಂತೆಯೂ ಅವರು ಸೂಚಿಸಿದರು.
ತಹಶೀಲ್ದಾರರು, ನಗರ ಯೋಜನಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿಯ ಕೆರೆಗಳನ್ನು ಗುರುತಿಸಬೇಕು. ಅವುಗಳ ಸರ್ವೇ ಕಾರ್ಯಕ್ಕೆ ಆದ್ಯತೆಯ ಮೇಲೆ ಕ್ರಮ ವಹಿಸಬೇಕು. ಒತ್ತುವರಿಯನ್ನು ಸ್ಥಳೀಯರ ಸಹಕಾರದೊಂದಿಗೆ ತೆರವುಗೊಳಿಸಬೇಕು. ಅದಕ್ಕಾಗಿ ಅಧಿಕಾರಿಗಳ ನಡುವೆ ಸಮನ್ವಯತೆ ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು.
ಅದಕ್ಕೂ ಮುನ್ನ ಇಲಾಖೆಗಳಲ್ಲಿರುವ ಮಾಹಿತಿಯನ್ನು ಖಚಿತ ಪಡಿಸಿಕೊಂಡು ಸ್ಥಳ ಪರಿಶೀಲನೆ ನಡೆಸಬೇಕು. ಕೆರೆಗಳು ಅಥವಾ ಜಲಮೂಲಗಳ ಮೂಲ ಮಾಲಿಕತ್ವ ಯಾರಿಗೆ ಸೇರಿದ್ದಾಗಿದೆ ಎಂಬುದನ್ನು ನೋಡಿಕೊಂಡು ದಾಖಲೆಗಳನ್ನು ಸರಿಪಡಿಸಿಕೊಳ್ಳಬೇಕೆಂದ ಅವರು, ಸಂಬಂಧಿತ ಇಲಾಖಾಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆ ನಡೆಸಿ, ಸಮರ್ಪಕವಾದ ಮಾಹಿತಿಯನ್ನು ನೀಡುವಂತೆ ಅವರು ಸೂಚಿಸಿದರು.
ಒತ್ತುವರಿ ತೆರವುಗೊಳಿಸಿದ ಪ್ರದೇಶದಲ್ಲಿ ಪುನಃ ಒತ್ತುವರಿ ಕಾರ್ಯ ನಡೆಸದಂತೆ ನೋಡಿಕೊಳ್ಳಬೇಕಲ್ಲದೇ ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಗಿಡನೆಡಲು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಅವರು, ಜಿಲ್ಲೆಯ ಸೊರಬ, ಶಿಕಾರಿಪುರ ತಾಲೂಕುಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಕೆರೆಗಳಿದ್ದು, ಅಲ್ಲಿನ ಕೆರೆಗಳ ಮಾಹಿತಿಯನ್ನು ಸಂಗ್ರಹಿಸಿ, ಕೂಡಲೇ ಸಲ್ಲಿಸುವಂತೆ ಅವರು ಸೂಚಿಸಿದರು.
ಅಲ್ಲದೇ ಅರಣ್ಯ ಇಲಾಖೆಯ ವ್ಯಾಪ್ತಿಗೊಳಪಡುವ ಕೆರೆಗಳ ಮಾಹಿತಿಯನ್ನು ಸಂಬಂಧಿಸಿದ ಅರಣ್ಯಾಧಿಕಾರಿಗಳಿಂದಲೇ ಪಡೆದುಕೊಳ್ಳಲಾಗುವುದು ಎಂದವರು ನುಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಮಹಾನಗರಪಾಲಿಕೆ ಆಯುಕ್ತೆ ಶ್ರೀಮತಿ ಕವಿತಾ ಯೋಗಪ್ಪನವರ್ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು, ಸಣ್ಣ ನೀರಾವರಿ, ಸ್ಥಳೀಯ ಸಂಸ್ಥೆಗಳ ಅಭಿಯಂತರರು, ಅರಣ್ಯಾಧಿಕಾರಿಗಳು ಉಪಸ್ಥಿತರಿದ್ದರು.