ಸುಳೇಬೈಲು,ಜು.18:
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್ಕೆಡಿಆರ್ಡಿಪಿ) ಹಾಗೂ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಸುಳೇಬೈಲು ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಮಾಹಿತಿ ಶಿಬಿರ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಉಪನಿರ್ದೇಶಕರ ಕಚೇರಿ, ಶಿವಮೊಗ್ಗದ ದೈಹಿಕ ಶಿಕ್ಷಣಾಧಿಕಾರಿಗಳಾದ ಪ್ರಕಾಶ್ ಹಾಗೂ ವಿಷಯ ಪರಿವೀಕ್ಷಕರಾದ ನಬಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಪರಿಸರ ಸಂರಕ್ಷಣೆ, ವೃಕ್ಷಾರೋಪಣೆಯ ಮಹತ್ವ ಮತ್ತು ವಿದ್ಯಾರ್ಥಿಗಳು ಪ್ರಕೃತಿ ಸಂರಕ್ಷಣೆಯಲ್ಲಿ ವಹಿಸಬೇಕಾದ ಪಾತ್ರದ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಎಂ. ಶಿವರಾಂ ವಹಿಸಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದನ್ನು ಪೋಷಿಸುವ ಸಂಕಲ್ಪ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಪಲ್ಲವಿ, ಕೃಷಿ ಮೇಲ್ವಿಚಾರಕರಾದ ಸತೀಶ್ ಹಾಗೂ ಯೋಜನೆಯ ಸಿಬ್ಬಂದಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾಧರ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ರಾಜಕುಮಾರ ಶಿಕ್ಷಕರು ವಂದನಾರ್ಪಣೆ ಸಲ್ಲಿಸಿದರು. ರವಿಕುಮಾರ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.