ಶಿವಮೊಗ್ಗ : ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್.ಅರುಣ್ ಅವರು ಸೋಮವಾರ ಅಪರ ಜಿಲ್ಲಾಧಿಕಾರಿ ಅಭಿಷೇಕ್ ಅವರನ್ನು ಭೇಟಿ ಮಾಡಿ, ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಿವಿಧ ಜನಪರ ಸಮಸ್ಯೆಗಳ ಕುರಿತು ಸಮಗ್ರ ಮನವಿ ಸಲ್ಲಿಸಿದರು.

ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರನ್ನು ದೀರ್ಘಕಾಲದಿಂದ ಕಾಡುತ್ತಿರುವ ಈ-ಸ್ವತ್ತು ಸಮಸ್ಯೆ, ಕುಡಿಯುವ ನೀರಿನ ಅವ್ಯವಸ್ಥೆ, ರಸ್ತೆ ಹಾಗೂ ಚರಂಡಿಗಳ ಅಭಿವೃದ್ಧಿ, ಸ್ವಚ್ಛತಾ ವ್ಯವಸ್ಥೆಯ ಕೊರತೆ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದ ಅವರು, ಅವುಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಸಾರ್ವಜನಿಕರ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ನಿರ್ಲಕ್ಷಿಸದೆ, ಜನರ ದೈನಂದಿನ ಬದುಕಿಗೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಿ ಮೂಲಸೌಕರ್ಯಗಳನ್ನು ಸುಧಾರಿಸಬೇಕು ಎಂದು ಅವರು ಅಧಿಕಾರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಜಗದೀಶ್, ಹೊಳೆಹೊನ್ನೂರು ಮಂಡಲ ಅಧ್ಯಕ್ಷರಾದ ಮಲ್ಲೇಶಪ್ಪ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯ್ಡು, ಮುಖಂಡರಾದ ಸತೀಶ್, ವೆಂಕಟೇಶ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.